ಉಡುಪಿ ಘಟನೆ ವಿಚಾರದಲ್ಲಿ ರಾಜಕೀಯ ಬೇಡ, ಮಕ್ಕಳ ಹಿತಾಸಕ್ತಿ ಮುಖ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇಂತ ಪ್ರಕರಣಗಳು ಸಮಾಜಕ್ಕೆ ಕಳಂಕ, ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಯಾವುದೇ ಜಾತಿ ಧರ್ಮ ಮುಖ್ಯ ಅಲ್ಲ, ಮಕ್ಕಳ ಹಿತಾಸಕ್ತಿ ಮುಖ್ಯ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದರು. ಮಣಿಪುರ ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ, ಅದ್ರ ಬಗ್ಗೆ ತಲೆಕೆಡಿಸಿಕೊಳ್ಳದ ರಾಜ್ಯದ ವಿರೋಧ ಪಕ್ಷ, ಉಡುಪಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಯತ್ನಿಸುತ್ತಿದೆ ಎಂದು ಸಚಿವರು ಕಿಡಿ ಕಾರಿದರು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
* ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 28 ಕೋಟಿ ನಷ್ಟ
ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ