ಜುಲೈ ೩೦ ಮತ್ತು ೩೧ ರಂದು ಸಿಇಟಿ ಪರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಕಾರವಾರ -: ಇದೇ ಜುಲೈ ೩೦ ಮತ್ತು ೩೧ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ೨ ಗಂಟೆ ಮುಂಚಿತವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆ ಸಿದ್ದತೆ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಪರೀಕ್ಷಾ ಕೇಂದ್ರಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮಾತನಾಡಿ ಈ ವರ್ಷ ಕೋವಿಡ್-೧೯ ವಿಶೇಷ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಎದುರಿಸುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ೨ ಗಂಟೆ ಮುಂಚಿತವಾಗಿ ಪರೀಕ್ಷೆಗೆ ಹಾಜರಿರುವಂತೆ ನೋಡಿಕೊಳ್ಳಬೇಕು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಪರೀಕ್ಷೆ ನಡೆಸುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್-೧೯ ಪಾಸಿಟಿವ್ ಇರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ, ಆದರೆ ಕಂಟೈನ್ಮೆಂಟ್ ಜೋನ್, ಹೋಮ್ ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಎಲ್ಲ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಮಾಸ್ಕ್ ಧರಿಸದೇ ಬರುವಂತಹ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಬೇಕೆಂದರು.
ಕೋವಿಡ್‌ಗೆ ಸಂಬಂಧ ಪಟ್ಟ ಹಾಗೆ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳನ್ನು ಮಾತ್ರ ಮಾಡಲಾಗುವುದು, ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷ ೭ ಪರೀಕ್ಷಾ ಕೇಂದ್ರಗಳನ್ನು ತೆಗೆಯಲಾಗುತ್ತಿತ್ತು. ಆದರೆ ಈ ವರ್ಷ ಕೋವಿಡ್-೧೯ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕಾಗಿ ೧೨ ಪರೀಕ್ಷಾ ಕೇಂದ್ರಗಳನ್ನು ತೆಗೆಯಲಾಗುತ್ತಿದೆ. ಅಂಕೋಲಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೧೬೮, ಭಟ್ಕಳದ ಅಂಜುಮನ್ ಪಿಯು ಕಾಲೇಜು ೨೬೪, ದಾಂಡೇಲಿಯಲ್ಲಿ ಬಂಗೂರ್ ನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ೨೬೪, ಹಳಿಯಾಳದಲ್ಲಿ ಶಿವಾಜಿ ಪದವಿ ಪೂರ್ವ ಕಾಲೇಜು ೧೪೪, ಹೊನ್ನಾವರದ ಎಂಪಿಇಎಸ್ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ೨೪೦, ಕಾರವಾರದ ಸರಕಾರಿ ಪದವಿ ಪೂರ್ವ ಕಾಲೇಜು ೨೬೪ ಮತ್ತು ಶಿವಾಜಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ೩೩೬, ಕುಮಟಾದ ಡಾ.ಎ.ವಿ. ಬಾಳಿಗಾ ಪದವಿ ಪೂರ್ವ ಕಾಲೇಜಿನಲ್ಲಿ ೪೦೮ ಮತ್ತು ಸರಕಾರಿ ಹನುಮಂತ ಬೆಣ್ಣೆ ಪದವಿ ಪೂರ್ವ ಕಾಲೇಜಿನಲ್ಲಿ ೩೧೨, ಶಿರಸಿಯ ಎಂಇಎಸ್ ಪಿಯು ಕಾಲೇಜು ೩೩೬ ಮತ್ತು ಮಾರಿಕಾಂಬಾ ಪದವಿ ಪೂರ್ವ ಕಾಲೇಜು ೫೨೮ ಹಾಗೂ ಎಂಇಎಸ್ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ೨೪೦ ರಂತೆ ಒಟ್ಟು ೩,೫೦೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರದ್ ನಾಯ್ಕ, ತಹಶೀಲ್ದಾರ ಆರ್.ವಿ.ಕಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ