Kannada NewsKarnataka NewsNationalPolitics

*ಜಿಲ್ಲೆಯಲ್ಲಿ ಜೂನ್ 22 ರಂದು ಓಲಂಪಿಕ್ ರ‌್ಯಾಲಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತರರಾಷ್ಟ್ರೀಯ ಓಲಂಪಿಕ್ ಸಂಸ್ಥೆಯಿಂದ ಜೂನ್ 28 ರಂದು ವಿಶ್ವದಾದ್ಯಂತ “ಓಲಂಪಿಕ್ ಡೇ ರನ್-2025” ಆಯೋಜಿಸಲಾಗುತ್ತಿದ್ದು ಇದರ ಅಂಗವಾಗಿ ಜಿಲ್ಲೆಯಲ್ಲಿ “ಓಲಂಪಿಕ್ ಡೇ ರನ್-2025″ರ ರ‌್ಯಾಲಿ ಜೂನ್ 22 ರಂದು ಕೋಟೆ ಕೆರೆ ಆವರಣದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ (ಜೂ.03)  ಜಿಲ್ಲೆಯಲ್ಲಿ “ಓಲಂಪಿಕ್ ಡೇ ರನ್-2025” ಆಯೋಜಿಸುವ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ರ್ಯಾಲಿಯಲ್ಲಿ ಪಾಲ್ಗೊಳ್ಳಲು ಕರೆ ನೀಡಲಾಗುವುದು. ಒಲಂಪಿಕ್ ರ‌್ಯಾಲಿ ಕೋಟೆ ಕೆರೆಯಿಂದ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕೃಷ್ಣ ದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದ ವರೆಗೆ ತಲುಪಲಿದೆ ಎಂದರು.

ಅಂದಾಜು 4.2 ಕಿಲೋ ಮೀಟರ್, ರ‌್ಯಾಲಿ ಸಂದರ್ಭದಲ್ಲಿ ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ರ್ಯಾಲಿಗೆ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಪೊಲೀಸ್ ಇಲಾಖೆ ನಿರ್ವಹಿಸಬೇಕು.

ರ‌್ಯಾಲಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ, ಪಾನಕ, ಕುಡಿಯುವ ನೀರು, ಅಲ್ಪೋಪಹಾರ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಇಲಾಖೆಯಿಂದ ಆರೋಗ್ಯ ಚಿಕಿತ್ಸೆ ಒದಗಿಸಲು ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಶಾಲಾ-ಕಾಲೇಜು, ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್.ಬಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button