

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದ ನೂತನ ಸರಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರುತ್ತಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ ಉಪಮುಖ್ಯಮಂತ್ರಿಯಾಗಿ ಹಾಗೂ ಹಲವು ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ.
ವಿಶೇಷವೆಂದರೆ ಡಿ.ಕೆ.ಶಿವಕುಮಾರ ಈ ಸರಕಾರದ ಏಕೈಕ ಉಪಮುಖ್ಯಮಂತ್ರಿಯಾಗಲಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಮಾತ್ರ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಸಹ ಸುಳ್ಳಾಗಿದೆ.
ಗುರುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನಂತರ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಈ ಕುರಿತು ಮಾಹಿತಿ ನೀಡಿದರು.
