*ಪುರುಷರಿಗಾಗಿ ಪ್ರತ್ಯೇಕ ಬಸ್ ಓಡಿಸಿ*; *ಬೆಳಗಾವಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್ಗಳು ಸಂಪೂರ್ಣ ಭರ್ತಿಯಾಗುತ್ತಿವೆ. ಇದರಿಂದ ಪುರುಷ ಪ್ರಯಾಣಿಕರು ಬಸ್ಗಳಲ್ಲಿ ಪ್ರಯಾಣಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪುರುಷ ಪ್ರಯಾಣಿಕರಿಗಾಗಿ ಪ್ರತ್ಯೇಕ ಬಸ್ಗಳನ್ನು ಓಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್ ಬಡಿಗೇರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ದೊರೆಯುತ್ತಿದೆ. ಆದರೆ, ಈ ಯೋಜನೆಯ ಪರಿಣಾಮವಾಗಿ ಬಸ್ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ ಪುರುಷ ಪ್ರಯಾಣಿಕರಿಗೆ ಬಸ್ಗಳಲ್ಲಿ ಆಸನ ಸಿಗದೆ ನಿಂತುಕೊಂಡು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೊಮ್ಮೆ ಬಸ್ಗಳಲ್ಲಿ ಸ್ಥಳಾವಕಾಶವಿಲ್ಲದೆ ಪ್ರಯಾಣಿಕರು ಬಸ್ಗಳನ್ನು ಹತ್ತಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳೆಯರಿಗೆ ನೀಡಿರುವ ಉಚಿತ ಪ್ರಯಾಣದ ಸೌಲಭ್ಯಕ್ಕೆ ತಮ್ಮ ವಿರೋಧವಿಲ್ಲ. ಆದರೆ, ಪುರುಷ ಪ್ರಯಾಣಿಕರಿಗೂ ಸುಗಮ ಪ್ರಯಾಣದ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಹೀಗಾಗಿ ಪುರುಷ ಪ್ರಯಾಣಿಕರಿಗಾಗಿ ಪ್ರತ್ಯೇಕ ಬಸ್ಗಳನ್ನು ಓಡಿಸುವ ಮೂಲಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಹಾಗೂ ಕಾರ್ಮಿಕ ವರ್ಗದವರು ಜೀವನ ನಡೆಸಲು ಪರದಾಡುವಂತಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಪುರುಷರಿಗಾಗಿ ಪ್ರತ್ಯೇಕ ಬಸ್ಗಳ ವ್ಯವಸ್ಥೆ ಮಾಡುವುದು ಸೇರಿದಂತೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.




