ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿಸ್ಥಾನ ಬದಲಾಯಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಗರಂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚುನಾವಣೆ ಫಲಿತಾಂಶದ ಬಳಿಕ ವಿರೋಧ ಪಕ್ಷದ ನಾಯಕನನ್ನೇ ಬದಲಾಯಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ತಿರುಗೇಟು ನೀಡಿದ್ದಾರೆ.
ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ಸಂಜೆ ಹೊರಡುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಪದೇ ಪದೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಶಿರಾ ಮತ್ತು ರಾಜರಾಜೇಶ್ವರಿ ನಗರದ ಚುನಾವಣೆಯಲ್ಲಿ ಸಿದ್ದರಾಮಯ್ಯ ನಾಯಕತ್ವದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸುತ್ತದೆ. ಹಾಗಾಗಿ ವಿರೋಧ ಪಕ್ಷದ ನಾಯಕನನ್ನೇ ಬದಲಾಯಿಸುತ್ತಾರೆ. ಬಿಜೆಪಿ ಪ್ರಚಂಡ ಬಹುಮತದಿಂದ ಗೆಲ್ಲುತ್ತದೆ. ಬಿಜೆಪಿ ಶಕ್ತಿ ವೃದ್ಧಿಯಾಗುತ್ತದೆ. ಆಗ ಸಿಎಂ ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಅಗತ್ಯವಾದರೆ ಉಪಚುನಾವಣೆ ಫಲಿತಾಂಶದ ಬಳಿಕ ದೆಹಲಿಗೆ ತೆರಳುತ್ತೇನೆ. ನಿನ್ನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿದ್ದಾರೆ. ನ.12ರ ನಂತರ ಅವರೊಂದಿಗೆ ಚರ್ಚಿಸಿ, ದೆಹಲಿಗೆ ತೆರಳುವ ಬಗ್ಗೆ ತೀರ್ಮಾನಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಗುರುವಾರ ಸಂಜೆ ಮಂಗಳೂರಿನಿಂದ ವಾಪಸ್ಸಾಗುತ್ತೇನೆ ಎಂದು ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ