*ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ; ಬೆಂಗಳೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗುವ ಮಹಾ ಮೈತ್ರಿಕೂಟ ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಇಂದು ಹಾಗೂ ನಾಳೆ ನಡೆಯಲಿದೆ. ಸಭೆಯಲ್ಲಿ 23 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ವಿಪಕ್ಷ ನಾಯಕರು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿವೆ.
ಮಹಾ ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಆಗಮಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು ಬರಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ