*8 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಜುಲೈ 9ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಇಲಾಖೆ ಸೂಚನೆ ಬೆನ್ನಲೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಒಟ್ಟು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಪೈಕಿ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ, ಆಯ್ದ ಹೋಬಳಿಗಳಿಗೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಳಸಾ, ಮೂಡಿಗೆರೆ, ಶೃಂಗೇರಿ, ಕೊಪ್ಪ ಎನ್.ಆರ್ ಪುರ, ಜಾಗರ, ಖಾಂಡ್ಯ ಆಲ್ಲೂರು, ವಸ್ತಾರೆ ಹೋಬಳಿಗಳಿಗೆ ಮಾತ್ರ ಈ ರಜೆ ಅನ್ವಯವಾಗಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆ ದಾಂಡೇಲಿ ಹಾಗು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯ ಹಿನ್ನಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.