Kannada NewsKarnataka News

ಸಪ್ತಪದಿ ಯೋಜನೆ ಮರುಚಾಲನೆಗೆ ಆದೇಶ

*-ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ*

   ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಆದೇಶ ಹೊರಡಿಸಲಾಗಿದೆ.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ” ಯೋಜನೆಯನ್ನು ಪ್ರಾರಂಭಿಸಿತ್ತು. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷ.
ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನಲೆಯಲ್ಲಿ, ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಏಪ್ರಿಲ್‌ ಮತ್ತು ಮೇ, 2022 ರ ಆಯ್ದ ಏ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್‌ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ – ಸಪ್ತಪದಿ ನಡೆಸಲು ಅದೇಶಿಸಲಾಗಿದೆ.
 ಕೋವಿಡ್‌ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಏಪ್ರಿಲ್‌ 28, 2022 ಮತ್ತು ಮೇ 11 ಮತ್ತು 25, 2022 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ
 – ಶಶಿಕಲಾ ಅ.ಜೊಲ್ಲೆ,  ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರು*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button