Kannada NewsKarnataka NewsLatestPolitics

*ಪಲ್ಲಕ್ಕಿ ಬಸ್ ಗಳಿಗೆ ಚಾಲನೆ; ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ ಎಂದ ಡಿಸಿಎಂ*

ಈ ಬಸ್ ನಲ್ಲಿ ಪ್ರಯಾಣ ಮಾಡಿ ನೋಡು ಎಂದು ಪತ್ನಿಗೂ ಹೇಳಿದ್ದೇನೆ ಎಂದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ನಾವು ಗ್ಯಾರಂಟಿ ಯೋಜನೆ ಘೋಷಿಸಿದಾಗ ಅನೇಕರು ನಮ್ಮನ್ನು ಟೀಕಿಸಿದರು. ಬೇರೆ ರಾಜ್ಯದ ಮುಖ್ಯಮಂತ್ರಿಗಳು, “ನಿಮ್ಮಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ” ಎಂದು ನನ್ನನ್ನು ಕೇಳಿದ್ದರು. ನಮ್ಮ ರಾಜ್ಯದ ಸಾರಿಗೆ ಸೇವೆ ಇಡೀ ದೇಶದಲ್ಲಿಯೇ ಮಾದರಿಯಾಗಿದೆ. ಬೇರೆ ಬೇರೆ ರಾಜ್ಯಗಳು ನಮ್ಮ ರಾಜ್ಯದ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಲ್ಲಕ್ಕಿ ಬಸ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ, ಹೆಣ್ಣು ಕುಟುಂಬದ ಕಣ್ಣು, ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ನೀಡಿ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಲ್ಲಿ ಈವರೆಗೂ ಸುಮಾರು 70.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ.

Home add -Advt

ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಈ ಮೊತ್ತ ನೀಡಬೇಕಾಗಿದ್ದು. ಸರ್ಕಾರದ ಮೇಲೆ ಹೊರೆ ಇದೆ. ಕಳೆದ ಏಳೆಂಟು ವರ್ಷಗಳಿಂದ ರಾಜ್ಯದ ಬಸ್ ದರದಲ್ಲಿ ಏರಿಕೆ ಮಾಡಿಲ್ಲ. ಸಾರಿಗೆ ಸಂಸ್ಥೆಗಳನ್ನು ವೃತ್ತಿಪರತೆಯಲ್ಲಿ ಮುನ್ನಡೆಸಲು ಬದ್ಧತೆ ಇಲ್ಲದ ಕಾರಣ ಸಂಸ್ಥೆ ಸೋರಗುವಂತಾಗಿದೆ. ಸರ್ಕಾರಿ ಸಂಸ್ಥೆಯಾಗಿ ಲಾಭ ಮಾಡುವುದರ ಜತೆಗೆ, ಜನರಿಗೂ ಅನುಕೂಲ ಮಾಡಿಕೊಡಬೇಕು. ಈ ಸಂಸ್ಥೆಯ ಕಾರ್ಮಿಕರ ಹಿತವನ್ನು ನಾವು ಕಾಯಬೇಕು. ಹೀಗಾಗಿ ಸಂಸ್ಥೆ ಲಾಭ ಕಾಣುವುದು ಮುಖ್ಯ. ಕಾರ್ಮಿಕರ ಹಿತ ಕಾಯಲು ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ.ವರೆಗೂ ವಿಮಾ ಪರಿಹಾರ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಇತರೆ ರಾಜ್ಯದ ಇತರೆ ಸಾರಿಗೆ ಸಂಸ್ಥೆಗಳಿಗೂ ಇದನ್ನು ವಿಸ್ತರಿಸಿ, ಎಲ್ಲ ಸಂಸ್ಥೆಗಳನ್ನು ಸಮಾನವಾಗಿ ನೋಡುವ ಕೆಲಸ ಮಾಡುತ್ತೇವೆ ಎಂದರು.

ಇಂದು ಬೆಳಗ್ಗೆ ಈ ಕಾರ್ಯಕ್ರಮಕ್ಕೆ ಬರುವ ಮುನ್ನ ನನ್ನ ಪತ್ನಿಗೂ ಈ ಬಸ್ ವಿಚಾರ ತಿಳಿಸಿ ಮೈಸೂರಿಗೆ ಹೋಗುವಾಗ ಈ ಬಸ್ ನಲ್ಲಿ ಪ್ರಯಾಣ ಮಾಡಿ ನೋಡು ಎಂದು ಹೇಳಿ ಬಂದಿದ್ದೇನೆ. ಈ ಹಿಂದೆ ಪಲ್ಲಕ್ಕಿಯನ್ನು ರಾಜ ಮಹಾರಾಜರನ್ನು ಹೊರಲು ಬಳಸಲಾಗುತ್ತಿತ್ತು, ಈಗ ನಮ್ಮ ಮಹಿಳೆಯರು ಹಾಗೂ ಪ್ರಯಾಣಿಕರನ್ನು ಈ ಪಲ್ಲಕ್ಕಿ ಹೊರಲಿದೆ. ಈ ಬಸ್ ಗೆ ಪಲ್ಲಕ್ಕಿ ಎಂದು ಅತ್ಯುತ್ತಮ ಹೆಸರಿಟ್ಟವರಿಗೆ ಪ್ರಮಾಣಪತ್ರ ನೀಡಿ ಗೌರವಿಸಬೇಕು ಎಂದು ಹೇಳಿದರು.

ನಾನು ದೆಹಲಿ ಸೇರಿದಂತೆ ಬೇರೆ ರಾಜ್ಯಗಳ ಸಾರಿಗೆ ಸಂಸ್ಥೆಗಳನ್ನು ಭೇಟಿ ಮಾಡಿದಾಗ ಅವರು ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್ ಗಳ ಫೋಟೋಗಳನ್ನೇ ಅವರು ಬಳಸುತ್ತಾರೆ. ನಮ್ಮ ಸಾರಿಗೆ ಸಂಸ್ಥೆಗಳು ದೇಶದಲ್ಲೇ ಅತ್ಯುತ್ತಮ ಸೇವೆ ನೀಡುತ್ತಿರುವ ಸಾರಿಗೆ ಸಂಸ್ಥೆಗಳಾಗಿವೆ. ಹೀಗಾಗಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಅಧಿಕಾರಿಗಳು ಹಾಗೂ ಕಾರ್ಮಿಕರಿಗೆ ಅಭಿನಂದನೆಗಳು.

ಡಿವಿಜಿ ಅವರು ಒಂದು ಮಾತು ಹೇಳಿದ್ದಾರೆ.
ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ ।
ನಗುವ ಕೇಳುತ ನಗುವುದತಿಶಯದ ಧರ್ಮ ॥
ನಗುವ ನಗಿಸುವ ನಗಿಸಿ ನಗುತ ಬಾಳುವ ವರವ ।
ಮಿಗೆ ನೀನು ಬೇಡಿಕೊಳೊ – ಮಂಕುತಿಮ್ಮ ಎಂದು ಹೇಳಿದ್ದಾರೆ.

ರಾಜ್ಯದ ಮಹಿಳೆರು ತಮ್ಮ ಕುಟುಂಬದವರನ್ನು ಬಸ್ ನಲ್ಲಿ ಕರೆದುಕೊಂಡು ಪ್ರಯಾಣ ಮಾಡಲಿ. ಇಂದು 100 ಕೆಎಸ್ಆರ್ ಟಿಸಿ ಬಸ್ ಹಾಗೂ 40 ಎಸಿ ರಹಿತ ಸ್ಲೀಪರ್ ಬಸ್ ಗಳನ್ನು ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಈ ಪಲ್ಲಕ್ಕಿ ಬಸ್ ನಮ್ಮ ಇತಿಹಾಸ ಪುಟಕ್ಕೆ ಸೇರಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಅವರ ತಂಡಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button