ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಈ ನಡುವೆ ಜಯಮೃತ್ಯುಂಜಯ ಸ್ವಾಮೀಜಿ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಧ್ಯಾಹ್ನದವರೆಗೆ ಗಡುವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನದ ಒಳಗೆ ಒಪ್ಪಿಗೆ ನೀಡಿ ಪತ್ರ ಹೊರಡಿಸಬೇಕು. ಸರ್ಕಾರಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಗಡುವು ನೀಡಲಾಗಿದ್ದು, ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಅದಕ್ಕೂ ಬಗ್ಗದಿದ್ದರೆ ಮತ್ತೆ ನಮ್ಮ ಹೋರಾಟ ಮುಂದುವರೆಸಲಿದ್ದೇವೆ. ಒಟ್ಟಾರೆ ಬೇಡಿಕೆ ಈಡೇರುವವರೆಗೂ ಬೆಂಗಳೂರು ಬಿಟ್ಟು ಹೋಗುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯುತ್ತಿದ್ದು, 10 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ