*ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಬಸವಜಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬೆಳಗಾವಿಯಲ್ಲಿ ನಡೆಯಲಿದ್ದ ಟ್ರ್ಯಾಕ್ಟರ್ ರ್ಯಾಲಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದರಿಂದ ಪಂಚಮಸಾಲಿ ಮುಖಂಡರು ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಮಾಜದ ಹೋರಾಟವನ್ನು ಹತ್ತಿಕ್ಕುವ ಯತ್ನ ಎಂದು ಕಿಡಿಕಾರಿದ್ದರು. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಅತ್ತ ಸದನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆದ್ದರು.
ಈ ಬೆಳವಣಿಗೆ ಬೆನ್ನಲ್ಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಮುಖಂಡರ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ನಾಳಿನ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರತಿಭಟನೆ ವಿಚಾರವಗಿ ಯಾವುದೇ ಗೊಂದಲವಿಲ್ಲ. ಆದರೆ ಪ್ರತಿಭಟನಾಕಾರಿಗೆ ಸ್ಥಳ ನಿಯೋಜನೆ ಬಗ್ಗೆ ಗೊಂದಲವಿತ್ತು. ಶಾಂತಿಯುವ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಟ್ರ್ಯಾಕ್ಟರ್ ರ್ಯಾಲಿ ಮಾಡುವಂತಿಲ್ಲ ಎಂದು ತಿಳಿಸಿದರು.
ಈ ವೇಳೆ ಕಮೀಷ್ನರ್ ಯಡಾ ಮಾರ್ಟೀನ್, ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಅವಕಾಶ ನೀಡಲ್ಲ ಎಂದು ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಾಳಿನ ಹೋರಾಟಕ್ಕೆ ಅವಕಾಶ ನೀಡಿದ್ದಾರೆ. ಯಾವುದೇ ಭಾವೋದ್ವೇಗಕ್ಕೆ ಒಳಗಾಗುವಂತಿಲ್ಲ. ಶಾಂತಿಯುತ ಹೋರಾಟ ನಡೆಸಲು ಸೂಚಿಸಿದ್ದಾರೆ. ಸಮಾವೇಶದ ಬಳಿಕ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ