ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಹಲವು ವಾಹನಗಳು ಜಖಂ ಗೊಂಡಿವೆ.
ಗಾಯಾಳುಗಳನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಮತ್ತೊಂದೆಡೆ ಪ್ರತಿಭಟನಾಕಾರರ ಆಕ್ರೋಶ ಇನ್ನಷ್ಟು ಹೆಚ್ಚಿದೆ.
ಪರಿಷತ್ ಸದಸ್ಯರ, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ವಾಹನಗಳ ಗಾಜುಗಳು ಪುಡಿ ಪುಡಿಯಾಗಿವೆ.
ಮತ್ತೊಂದೆಡೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿಗೆ ಶಾಸಕರಾದ ಯತ್ನಾಳ್, ಅರವಿಂದ್ ಬೆಲ್ಲದ್ ಸಾಥ್ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ವಾಮೀಜಿ ಮನವೊಲಿಕೆಗೆ ಯತ್ನಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದಾಗ್ಯೂ ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆ ಪೊಲೀಸರು ಸ್ವಾಮೀಜಿ ಹಾಗೂ ಶಾಸಕ ಯತ್ನಾಳ್, ಬೆಲ್ಲದ್ ಸೇರಿ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ