*ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು.
ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಅಧೀಕ್ಷಕ ಮ್ಯಾಗೇರಿ ಹಾಗೂ ಉಪ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು.
ಇನ್ಮುಂದೆ ಜೈಲುಗಳ ಮೇಲೆ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪಿಸಲಾಗುವುದು. ಎಡಿಜಿಪಿ ಇದರ ನಿಗಾ ವಹಿಸಲಿದ್ದಾರೆ. ಎಲ್ಲಾ ಜೈಲುಗಳಲ್ಲಿಯೂ 15 ದಿನಗಳಲ್ಲಿ ಕಮಾಂಡ್ ಸೆಂಟರ್ ಕಾರ್ಯಾರಂಭವಾಗಲಿದೆ ಎಂದರು.




