
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಆಟದ ಮೈದಾನ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.
ತಾಲೂಕಿನ ಮಂಗೇನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಸೋಮವಾರ ಭೇಟಿ ನೀಡಿದ ಅವರು, ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕ್ರೀಡಾಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಆಟದ ಮೈದಾನ ಅಭಿವೃದ್ಧಿ ಮತ್ತು ಅವಶ್ಯವಿರುವ ಕಡೆಗಳಲ್ಲಿ ಹೊಸದಾಗಿ ಸುಸಜ್ಜಿತ ಆಟದ ಮೈದಾನ ನಿರ್ಮಿಸಲು ವಿಸ್ತ್ರತವಾದ ಕಾರ್ಯಯೋಜನೆಯನ್ನು ರೂಪಿಸಲಾಗುತ್ತದೆ ಎಂದರು.
ಕಳೆದ ಹಲವು ವರ್ಷಗಳಿಂದ ಮಂಗೇನಕೊಪ್ಪ ಶಾಲೆಯ ವಿದ್ಯಾರ್ಥಿಗಳು ವ್ಹಾಲಿಬಾಲ್ ಪಂದ್ಯದಲ್ಲಿ ರಾಷ್ಟ್ರಮಟ್ಟದವರೆಗೆ ಆಯ್ಕೆಯಾಗಿ ಮಿಂಚಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಸಾಧಕ ವಿದ್ಯಾರ್ಥಿಗಳನ್ನು ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಶಾಲೆಯ ಶಿಕ್ಷಕರನ್ನು ಇಲಾಖೆಯ ವತಿಯಿಂದ ಅಭಿನಂದಿಸುವುದಾಗಿ ತಿಳಿಸಿದರು.
ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯಲ್ಲೂ ಅಗಾಧವಾದ ಪ್ರತಿಭೆಯನ್ನು ಹೊಂದಿದ್ದಾರೆ. ಅವರಿಗೆ ಕ್ರೀಡಾ ಕ್ಷೇತ್ರದಲ್ಲಿ ವಿಪುಲವಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಪ್ರತಿ ಶಾಲೆಗೊಂದು ಸುಸಜ್ಜಿತ ಆಟದ ಮೈದಾನ ನಿರ್ಮಿಸುವ ಪರಿಕಲ್ಪನೆಯನ್ನು ತಾವು ಹೊಂದಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವಂತೆ ಶಿಕ್ಷಕರಿಗೆ ಸೂಚಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ಕೂಡಲೇ ಮಂಗೇನಕೊಪ್ಪ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸುಸಜ್ಜಿತ ಆಟದ ಮೈದಾನ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗೇನಕೊಪ್ಪ ಭೇಟಿಯ ಬಳಿಕ ಸಚಿವರು ಬೀಡಿ, ನಂದಗಡ, ಓಲಮನಿ, ಜಾಂಬೋಟಿ ಗ್ರಾಮಗಳ ಸರ್ಕಾರಿ ಶಾಲೆಗಳು ಮತ್ತು ಪಟ್ಟಣದ ಶಾಸಕರ ಮಾದರಿ ಕನ್ನಡ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಆಯುಕ್ತ ಮೆ.ಸಿದ್ಧಲಿಂಗಯ್ಯ ಹಿರೇಮಠ, ಬಿಇಒ ಲಕ್ಷ್ಮಣರಾವ್ ಯಕ್ಕುಂಡಿ, ಮಂಗೇನಕೊಪ್ಪ ಗ್ರಾ.ಪಂ ಪಿಡಿಒ ಬಾಲರಾಜ್ ಭಜಂತ್ರಿ, ತೋಪಿನಕಟ್ಟಿ ಮಹಾಲಕ್ಷ್ಮೀ ಗ್ರುಪ್ ಸಂಸ್ಥಾಪಕ ವಿಠ್ಠಲ ಹಲಗೇಕರ, ಬಿಜೆಪಿ ಮುಖಂಡರಾದ ಸಂಜಯ ಕುಬಲ, ಪ್ರಮೋದ ಕೊಚೇರಿ ಹಾಗೂ ಇತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ