Kannada NewsLatest

*ಬೆಳಗಾವಿ: ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲು ಸಚಿವೆ ಶೋಭಾ ಕರಂದ್ಲಾಜೆ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಭದ್ರತೆ ಹಾಗೂ ಶಿಷ್ಟಾಚಾರದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ(ಫೆ.23) ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆತಂದು ವಾಪಸ್ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು.

ಪ್ರಧಾನಮಂತ್ರಿಗಳು ಸಂಚರಿಸಲಿರುವ ಮಾರ್ಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ದುರಸ್ತಿ ಅಥವಾ ನಿರ್ಮಾಣ ಕಾಮಗಾರಿ ನಡೆಸಬೇಕು.

ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸ್ಥಳಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವನ್ನು ನಿಯೋಜಿಸಬೇಕು.

ಗಣ್ಯರು ಮಾತ್ರವಲ್ಲದೇ ಸಾರ್ವಜನಿಕರಿಗೂ ಅನುಕೂಲವಾಗುವಂತೆ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ವೈದ್ಯಕೀಯ ತಂಡಗಳು ಮತ್ತು ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು.

ಎಸ್.ಪಿ.ಜಿ. ತಂಡ ಬಂದ ನಂತರ ಕೂಲಂಕುಷವಾಗಿ ಚರ್ಚಿಸಿ ಕಾರ್ಯಕ್ರಮದ ಅಂತಿಮ ರೂಪುರೇಷೆಗಳನ್ನು ನಿರ್ಧರಿಸಬೇಕು.

ಸಾವಯವ ಮತ್ತು ಸಿರಿಧಾನ್ಯಗಳ ಪ್ರದರ್ಶನವನ್ನು ಕೂಡ ಏರ್ಪಡಿಸುವ ಕುರಿತು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ಶೋಭಾ ಕರಂದ್ಲಾಜೆ ತಿಳಿಸಿದರು.

ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಎಸ್.ಪಿ.ಜಿ. ಅಧಿಕಾರಿಗಳ ತಂಡ ಬಂದ ನಂತರವೇ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.

ಸಾರಿಗೆ ವ್ಯವಸ್ಥೆ, ವೇದಿಕೆ ನಿರ್ಮಾಣ, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಜಲಜೀವನ ಮಿಷನ್ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಯ ೧೧೦೦ ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಪ್ರಧಾನಮಂತ್ರಿ ಸಂಚರಿಸಲಿರುವ ಮಾರ್ಗಗಳ ದುರಸ್ತಿ, ಸ್ವಚ್ಛತೆ, ಸೌಂದರ್ಯೀಕರಣ ಕೆಲಸ ಮಾಡಲಾಗುತ್ತಿದೆ.

ಅಂದಾಜು ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮ ಸ್ಥಳದಲ್ಲಿ ಕೂಡ ಯಾವುದೇ ತೊಂದರೆಯಾಗದಂತೆ ಆಸನ ವ್ಯವಸ್ಥೆ, ಕುಡಿಯುವ ನೀರು, ಎಲ್.ಇ.ಡಿ. ಪರದೆಗಳು, ಅಂತರ್ಜಾಲ ಸಂಪರ್ಕ ಮತ್ತಿತರ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಾಸಕ ಅಭಯ್ ಪಾಟೀಲ ಮಾತನಾಡಿ, ಇಡೀ ದೇಶದ ವೇಷಭೂಷಣಗಳನ್ನು ಧರಿಸಿದ ಮಹಿಳಾ ತಂಡಗಳನ್ನು ಕಾರ್ಯಕ್ರಮದಲ್ಲಿ ನಿಯೋಜಿಸುವುದು ಸೇರಿದಂತೆ ರಾಷ್ಟ್ರಪುರುಷರನ್ನು ಸ್ಮರಿಸುವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಇದಲ್ಲದೇ ಸುಮಾರು ಹತ್ತು ಸಾವಿರ ಮಹಿಳೆಯರಿಗೆ ಪೇಟವನ್ನು ತೊಡಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತರಲಾಗುವುದು ಎಂದರು.
ಸಾವಿರಾರು ಜನರು ಏಕಕಾಲಕ್ಕೆ ಊಟಕ್ಕೆ ಆಗಮಿಸುವುದರಿಂದ ಊಟದ ಕೌಂಟರ್ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಪ್ರಧಾನಮಂತ್ರಿ ಸಂಚರಿಸುವ ಮಾರ್ಗದಲ್ಲಿ ಭದ್ರತೆ ಹಾಗೂ ಬ್ಯಾರಿಕೇಡಿಂಗ್ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ ಹೇಳಿದರು.

ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಉಪಸ್ಥಿತರಿದ್ದರು.

ರೈಲ್ವೆ, ಕೃಷಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

*ಮಹಿಳಾ ಕೃಷಿ ಕಾರ್ಮಿಕರ ಸಹಾಯಧನ ಹೆಚ್ಚಳ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ*

https://pragati.taskdun.com/cm-basavaraj-bommaikarrnataka-budgetvidhanasabhe/

*ವಿ.ಟಿ.ಯು 22ನೇ ಘಟಿಕೋತ್ಸವಕ್ಕೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button