Karnataka NewsLatestPolitics

*ಆಗಸ್ಟ್‌ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಆಗಮಿಸಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ.

Home add -Advt

ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ ಬಳಿಕ ಮೊದಲು ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮಕ್ಕೆ ತೆರಳಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.

ರಾಮಕೃಷ್ಣ ಆಶ್ರಮದ ಆಡಿಟೋರಿಯಂನಲ್ಲಿ ವಿಶೇಷ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಸುಮಾರು 30 ನಿಮಿಷಗಳ ಕಾಲ ಆಶ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ವಿಶೇಷ ಪಾಸ್ ವಿತರಿಸಲಾಗುತ್ತದೆ. ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲಾಗುತ್ತದೆ. ಜೊತೆಗೆ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ವಿಶೇಷ ನೆನಪಿನ ಕಾಣಿಕೆಯನ್ನೂ ಪ್ರಧಾನಿಗೆ ಅರ್ಪಿಸಲಾಗುತ್ತದೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸಂಸದ ಯದುವೀರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆಯಲ್ಲಿ ಕೆಲವೇ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Related Articles

Back to top button