Kannada NewsLatest

*ಪೋಕ್ಸೋ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಪೋಕ್ಸೋ ಪ್ರಕರಣಗಳ ವಿಚಾರಣೆ ನಡೆಸಲು ಪ್ರತಿ ಜಿಲ್ಲೆಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ನ್ಯಾಯಾಲಯಗಳಲ್ಲಿ ಪೋಕ್ಸೋ ಪ್ರಕರಣಗಳ ವಿಚಾರಣೆಗೆ ಅನುವಾಗುವಂತೆ ಸಹಾಯಕ ಸರ್ಕಾರಿ ಅಭಿಯೋಜಕರನ್ನು ನೇಮಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ವಿಧಾನ ಪರಿಷತ್ತಿನ ಕಲಾಪದಲ್ಲಿ ಶಾಸಕ ಛಲವಾದಿ ಟಿ.ನಾರಾಯಣಸ್ವಾಮಿಯ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ೨೦೧೯-೨೦ ಸಾಲಿನಲ್ಲಿ ರೂ.೭ ಕೋಟಿ, ೨೦೨೦-೨೧ ರಲ್ಲಿ ರೂ.೧ ಕೋಟಿಗಳನ್ನು ನಿರ್ಭಯ ಯೋಜನೆಯಡಿ ಬಿಡುಗಡೆ ಮಾಡಲಾಗಿದೆ. ಈ ಅನುದಾನದಲ್ಲಿ ರಾಜ್ಯದ ವಿವಿಧ ಠಾಣೆಗಳಲ್ಲಿ ಹೆಲ್ಪ್ಡೆಸ್ಕ್ಗಳನ್ನು ಸ್ಥಾಪಿಸಲಾಗಿದೆ. ೨೦೨೧-೨೨ ಸಾಲಿನಲ್ಲಿ ರೂ. ೨.೫ ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಮಹಿಳಾ, ಮಕ್ಕಳ ಹಾಗೂ ಸ್ಪಂದನ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರ ರಕ್ಷಣೆಗಾಗಿ ನಗರ ಹಾಗೂ ಜಿಲ್ಲಾ ಪ್ರದೇಶಗಳಲ್ಲಿ ಗಸ್ತು ಪಡೆಗಳನ್ನು ನಿಯೋಜಿಸಲಾಗಿದೆ. ಪಿಂಕ್, ಹೊಯ್ಸಳ, ಚೆನ್ನಮ್ಮ, ಓಬವ್ವ ಪಡೆಗಳು ಗಸ್ತು ಕಾರ್ಯ ನಿರ್ವಹಿಸುತ್ತಿವೆ. ಹೆಣ್ಣು ಮಕ್ಕಳಲ್ಲಿ ಆತ್ಮರಕ್ಷಣೆ ಕಲೆ ಬೆಳೆಸಲು ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ.

ಪೋಕ್ಸೋ ಕಾಯ್ದೆಯಡಿ ಮಕ್ಕಳ ಅತ್ಯಾಚಾರಿ ಆರೋಪಿಗೆ ಜೀವಾವಧಿಯಿಂದ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನು ರೂಪಿಸಲಾಗಿದೆ. ಪ್ರಕರಣದ ತನಿಖಾ ಅವಧಿಯನ್ನು ೯೦ ದಿನಗಳಿಂದ ೬೦ ದಿನಗಳಿಗೆ ಇಳಿಸಲಾಗಿದೆ. ಅತ್ಯಾಚಾರಿಗಳಿಗೆ ಜಾಮೀನು ಮಂಜೂರು ಮಾಡುವುದನ್ನು ನಿಷೇಧಿಸಲಾಗಿದೆ. ಕಾಯ್ದೆ ಅನುಸಾರ ವಿಚಾರಣೆಯನ್ನು ೦೨ ತಿಂಗಳಲ್ಲಿ ಹಾಗೂ ಮೇಲ್ಮನವಿಯನ್ನು ೦೬ ತಿಂಗಳಲ್ಲಿ ಇತ್ಯರ್ಥ ಪಡಿಸಲಾಗುವುದು.

ಬಹುತೇಕ ಪೋಕ್ಸೋ ಪ್ರಕರಣಗಳಲ್ಲಿ ಮಕ್ಕಳಿಗೆ ಹತ್ತಿರದವರೇ ಆರೋಪಿಗಳಾಗಿರುತ್ತಾರೆ. ಇದರಿಂದಾಗಿ ವಿಚಾರಣೆ ನಿಯಮಗಳು, ಅನುಸರಿಸಬೆಕಾದ ಕ್ರಮಗಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳೊಂದಿಗೆ ಹೇಗೆ ನಡೆದುಕೊಳ್ಳಬೇಕು. ಅವರ ಆರೈಕೆ, ವೈದ್ಯಕೀಯ ಚಿಕಿತ್ಸೆ, ಪುನರ್ವಸತಿ, ಮಾಧ್ಯಮಗಳ ಜವಾಬ್ದಾರಿ, ಸಮಾಜದ ಕರ್ತವ್ಯಗಳು, ಪರಿಹಾರ ಒದಗಿಸಲು ನಿರ್ದಿಷ್ಟ ಕಾರ್ಯವಿಧಾನವನ್ನು ಎಲ್ಲಾ ಪೊಲೀಸ್ ಠಾಣೆಗಳಿಗೆ ಒದಗಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಾಸಕ ಛಲವಾದಿ ಟಿ.ನಾರಾಯಣಸ್ವಾಮಿ ಮಾತನಾಡಿ, ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಿಗೆ ಭಯ ಹುಟ್ಟಿಸುವ ರೀತಿ ಪೊಲೀಸ್ ಕಾರ್ಯಾಚರಣೆ ನಡೆಸಬೇಕು. ತಳ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

*ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ*

https://pragati.taskdun.com/home-minister-araga-jnanendracyber-policevidhanasabha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button