Kannada NewsKarnataka NewsPolitics

*ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಟಿ.ನರಸೀಪುರದ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಗಣೇಶೋತ್ಸವ ಆಚರಣೆ ಮಾಡುವ ಯುವಕರಿಗೆ ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಎಚ್ಚರಿಕೆ ನೀಡಿರುವ ಹೇಳಿಕೆಗೆ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇನ್‌ಸ್ಪೆಕ್ಟರ್ ವಿರುದ್ಧ ನೇರ ಸಮರ ಸಾರಿದ್ದಾರೆ.

ಇನ್‌ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತು ಮಾಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತೀವ್ರ ಉದ್ವಿಗ್ನತೆ ಬೆನ್ನಲ್ಲೇ ಬಿಜೆಪಿಯ ಹಲವು ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ಹಿಂದೂ ವಿರೋಧಿ ಹಾಗೂ ತಾಲಿಬಾನಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದ ಕೇಸರಿ ಪಡೆ, ಅಧಿಕಾರಿಯನ್ನು ಅಮಾನತು ಮಾಡುವವರೆಗೂ ಅಹೋರಾತ್ರಿ ಧರಣಿ ನಡೆಸುವುದಾಗಿ ಪಟ್ಟುಹಿಡಿಯಿತು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆ ಮೆರವಣಿಗೆ ನಡೆಸಲು ಮುಂದಾದಾಗ, ಅವರನ್ನು ವಶಕ್ಕೆ ಪಡೆದರು.

ಇನ್‌ಸ್ಪೆಕ್ಟ‌ರ್ ಅಮಾನತಿಗೆ ಆಗ್ರಹಿಸಿ ಗಣೇಶನ ಮೂರ್ತಿ ಹಿಡಿದು ಮೆರವಣಿಗೆ, ಧರಣಿಗೆ ಮುಂದಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button