ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪ್ರಕರಣ ಸಂಬಂಧ ಮೂವರು ಅಮಾಯಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಪ್ರಕರಣದಲ್ಲಿ ಪಿಎಸ್ ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಗುಗ್ರಿ, ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎಸ್.ಕೆ.ರಾಜು, ಕಾನ್ಸ್ ಟೇಬಲ್ ಗಳಾದ ಸತೀಶ್ ಬಗಲಿ ಹಾಗೂ ತಿಮ್ಮಣ್ಣ ಪೂಜಾರ ಅಮಾನತುಗೊಂಡಿರುವ ಪೊಲೀಸರು.
ಆ.9ರಂದು ಕದಿರೇನಹಳ್ಳಿಯ ಸಿಮೆಂಟ್ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದರು. ಠಾಣಾಧಿಕಾರಿ ಶ್ರೀಧರ್ ಎಫ್ ಐ ಆರ್ ದಾಖಲಿಸಿದ್ದರಿಂದ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಮೂವರು 20 ದಿನಗಳ ಕಾಲ ಜೈಲು ಸೇರಿದ್ದರು. ಈ ವೇಳೆ ಬಂಧನಕ್ಕೊಳಗಾದ ವ್ಯಕ್ತಿಗಳ ಕುಟುಂಬದವರು, ಪೊಲೀಸರ ನಡೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ಪೊಲೀಸ್ ಬಾತ್ಮೀದಾರ ರಾಜನ್ ಎಂಬಾತನ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಬೆಂಗಳೂರು ನಗರ ಪೊಲೀಸ್ ಕಮಿಷರ್ ಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಗಿರೀಶ್ ಅವರಿಗೆ ಸೂಚಿಸಲಾಗಿತ್ತು. ತನಿಖೆ ವೇಳೆ ಬಾತ್ಮೀದಾರ ರಾಜನ್ ಸುಳ್ಳು ಮಾಹಿತಿ ಹಾಗೂ ಪೊಲೀಸ್ ಸಿಬ್ಬಂದಿಯ ಕರ್ತವ್ಯಲೋಪದಿಂದಾಗಿ ಮೂವರ ಬಂಧನವಾಗಿದೆ ಎಂದು ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಬಾತ್ಮಿದಾರ ರಾಜನ್ ಹಾಗೂ ಆತನ ಸ್ನೇಹಿತೆ ಚೈತ್ರಾಳನ್ನು ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ