*ಬೆಳಗಾವಿ ಗಡಿಯಲ್ಲಿ ಪೊಲೀಸರ ಕಾರ್ಯಾಚರಣೆ: 1 ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗಡಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್‌ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಓರ್ವ ಮಹಾರಾಷ್ಟ್ರದ ಸಂಚಾರಿ ಪೊಲೀಸ್ ಠಾಣೆಯೊಂದರ ವಾಹನ ಚಾಲಕನಾಗಿದ್ದಾನೆ. ಬಂಧಿತರಿಂದ ಒಂದು ಕಾರು, ನಕಲಿ ನೋಟು ಮುದ್ರಿಸಲು ಬಳಸಿದ ಪ್ರಿಂಟರ್, ಪೇಪರ್ ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಕಲಿ ನೋಟು ತಯಾರಿಕೆ, ವಹಿವಾಟು ವಿಚಾರವಾಗಿ ಸಾಂಗ್ಲಿ, ಕೊಲ್ಲಾಪುರ ಮತ್ತು ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.