ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬAದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿತ್ತನೆ ಬೀಜ ಮತ್ತು ಗೊಬ್ಬರದ ಬೇಡಿಕೆ, ಪೂರೈಕೆ ಹಾಗೂ ವಿತರಣೆ ಮೇಲೆ ನಿಗಾ ವಹಿಸಬೇಕು. ಮಳೆ ವಿಳಂಬವಾಗಿರುವುದರಿಂದ ರೈತರು ಕೂಡ ಆತಂಕದಲ್ಲಿರುತ್ತಾರೆ. ಆದ್ದರಿಂದ ಬೀಜ-ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರ ವಹಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಾಕಷ್ಟು ದಾಸ್ತಾನು ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಉದ್ಭವಿಸಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆ ಹಾಗೂ ಶಿಸ್ತಿನಿಂದ ಕೆಲಸ ಮಾಡಬೇಕು. ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಕ್ಯೂ. ಆರ್. ಕೋಡ್ ಮೂಲಕ ಬೀಜ ವಿತರಣೆ ಮಾಡಲಾಗುತ್ತಿದ್ದು, ಕೆಲವೊಮ್ಮೆ ತಾಂತ್ರಿಕ ತೊಂದರೆ ಉಂಟಾದಾಗ ಪರ್ಯಾಯ ವ್ಯವಸ್ಥೆ ಕೂಡ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ:
ಕಳಪೆ ಬೀಜ ವಿತರಣೆಯಾಗುತ್ತಿರುವ ಬಗ್ಗೆ ಕೆಲ ಜಿಲ್ಲೆಗಳಲ್ಲಿ ದೂರುಗಳು ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಇಂತಹ ಘಟನೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್ಚರಿಕೆಯನ್ನು ನೀಡಿದರು.
ಪ್ರಮಾಣೀಕರ ಇಲ್ಲದೇ ಬೀಜ ಮಾರಾಟವನ್ನು ವಿಚಕ್ಷಣಾ ತಂಡಗಳು ಪತ್ತೆ ಮಾಡಬೇಕು. ಈ ರೀತಿಯ ಅಕ್ರಮ ಕಂಡುಬಂದರೆ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಬೀಜ-ಗೊಬ್ಬರ ಮಾರಾಟ ಮಳಿಗೆಗಳನ್ನು ಸ್ವತಃ ಪರಿಶೀಲಿಸಿ ದಾಸ್ತಾನು ಲಭ್ಯತೆ ಹಾಗೂ ಸಮರ್ಪಕವಾಗಿ ವಿತರಣೆಗೆ ಕ್ರಮ ವಹಿಸಬೇಕು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಕೂಡಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ದತ್ತಾಂಶ ದಾಖಲಿಸಬೇಕು ಎಂದು ತಿಳಿಸಿದರು.
ರೈತರ ದೂರುಗಳ ಸ್ವೀಕಾರ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು. ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್ ಮಾತನಾಡಿ, ಮುಂಗಾರು ವಿಳಂಬ ಆಗಿರುವುದರಿಂದ ಏಕ ಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿರುವುದರಿಂದ ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಯನ್ನು ರಾಜ್ಯದಾದ್ಯಂತ ಖಚಿತಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಕೂಡಲೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಕೃಷಿ ಅಧಿಕಾರಿಗಳು ಪ್ರಮಾಣಪತ್ರ ನೀಡಿದ ಬಳಿಕವೇ ಬೀಜ ವಿತರಣಾ ಕೇಂದ್ರಕ್ಕೆ ಹೋಗುತ್ತದೆ. ಆದ್ದರಿಂದ ಎಲ್ಲಿಯಾದರೂ ಕಳಪೆ ಅಥವಾ ನಕಲಿ ಬೀಜಗಳ ವಿತರಣೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಜಾಗೃತ ತಂಡಗಳನ್ನು ಹೊಣೆ ಮಾಡಲಾಗುವುದು ಎಂದು ಕಾರ್ಯದರ್ಶಿ ಅನ್ಬುಕುಮಾರ್ ಎಚ್ಚರಿಕೆ ನೀಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಇರುವರೆಗೆ 93 ಮಿ.ಮೀ. ಮಳೆಯಾಗಬೇಕಿತ್ತು 86 ಮಿ.ಮೀ. ಮಳೆಯಾಗಿದ್ದು, ಶೇ.7ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ 35 ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ 170 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. 47,375 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ.
ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ರಸಗೊಬ್ಬರ 2.25 ಲಕ್ಷ ಮೆಟ್ರಿಕ್ ಟನ್ ಲಭ್ಯವಿರುತ್ತದೆ. ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಆದರೆ ಬಿತ್ತನೆಗೆ ಅನುಕೂಲ ಆಗುವಂತೆ ಮಳೆಯಾಗಿಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ವಿವರಿಸಿದರು.
ಕೃಷಿ ನಿರ್ದೇಶಕ ಜಿ.ಟಿ.ಪುತ್ರ, ಅಪರ ಕೃಷಿ ನಿರ್ದೇಶಕ ಸಿ.ಬಿ.ಬಾಲರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಉಪಸ್ಥಿತರಿದ್ದರು. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟ, ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ