Kannada NewsKarnataka NewsLatestPolitics

*ಸಿಎಂ ಡಿಕೆ ಶಿವಕುಮಾರ್‌ಗೆ ಅಧಿಕಾರದ ಮದ ನೆತ್ತಿಗೇರಿದೆ*: *ವಿಜಯೇಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ನೈಸ್ ಯೋಜನೆ, ಬಿಡದಿ ಟೌನ್‌ಶಿಪ್, ಫಾರಂ-7 ವಿವಾದದಿಂದ ಹಿಡಿದು ರಾಜ್ಯದ ಆರ್ಥಿಕ ಪರಿಸ್ಥಿತಿವರೆಗೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಾಗಲವಾಡಿ ಜುಂಜಪ್ಪನ ಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನೈಸ್ ಯೋಜನೆಯನ್ನು ಸರ್ಕಾರ ಟೇಕ್‌ಓವರ್ ಮಾಡಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಜನರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಆರೋಪಿಸಿದರು.

ಫಾರಂ-7 ಚುನಾವಣಾ ಆಯೋಗ ಕಲ್ಪಿಸಿರುವ ಅವಕಾಶವಾಗಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಇದನ್ನು ಬಳಸಬಹುದು. ಆದರೆ ಇದೇ ವಿಚಾರ ಮುಂದಿಟ್ಟುಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಿ, ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ದೂರಿದರು.

ವೀರಶೈವ ಲಿಂಗಾಯತ ಮಠಾಧೀಶರ ಸಭೆಯಲ್ಲಿ ಮುಖ್ಯಮಂತ್ರಿ ಬಳಸಿದ ಭಾಷೆಯನ್ನೂ ವಿಜಯೇಂದ್ರ ಟೀಕಿಸಿದರು. ಮಠಗಳ ಸಂಖ್ಯೆಯನ್ನು ಉಲ್ಲೇಖಿಸಿದ ರೀತಿ ಮಠಾಧೀಶರಿಗೆ ಅವಮಾನ ಮಾಡುವಂತಿತ್ತು ಎಂದು ಆರೋಪಿಸಿ, ಅಧಿಕಾರ ಶಾಶ್ವತವಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವಾಗ ರೈತರಿಗೆ ಘೋಷಿಸಿರುವ ಪರಿಹಾರ ಅತ್ಯಂತ ಕಡಿಮೆ ಎಂದು ಆಕ್ಷೇಪಿಸಿದರು. ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂಬುದು ಬಿಜೆಪಿಯ ಬೇಡಿಕೆಯಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸದ ಮೇಲೆ ಒತ್ತಡ ಹೆಚ್ಚಿದ್ದು, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ವಿಜಯೇಂದ್ರ ಆರೋಪಿಸಿದರು. ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಸುವ ವಿಚಾರಕ್ಕೂ ಪ್ರತಿಕ್ರಿಯಿಸಿದರು. ಮೈತ್ರಿ ಮುಂದುವರಿಯಬೇಕೆಂಬುದು ಬಿಜೆಪಿ ರಾಷ್ಟ್ರೀಯ ನಾಯಕರ ಅಪೇಕ್ಷೆಯಾಗಿದ್ದು, ಈ ಕುರಿತು ಎಚ್.ಡಿ.ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.

ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಯಾವ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಬೇಕು ಎಂಬುದನ್ನು ಮೊದಲೇ ಚರ್ಚಿಸಿ ತೀರ್ಮಾನಿಸಿದರೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರಿಗೆ ಅನುಕೂಲವಾಗಲಿದೆ. ಈ ಕುರಿತು ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button