Latest

ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದು, ತ್ವರಿತವಾಗಿ ಸಾಲ ವಿತರಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಈ ವೇಳೆ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕರುಗಳು ಆದ್ಯತೆ ನೀಡದೇ ಇರುವ ಬಗ್ಗೆ ದೂರುಗಳು ಬಂದಿದ್ದು, ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿರುವುದಕ್ಕೆ ಕಾರಣವೇನು ಎಂದು ತರಾಟೆಗೆ ತೆಗೆದುಕೊಂಡರು.

ಈ ಯೋಜನೆಗಳಡಿ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಆದ್ಯ ಗಮನ ಹರಿಸುವಂತೆ ಬ್ಯಾಂಕರುಗಳಿಗೆ ತಿಳಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸಲಾಗುವುದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಸಿ.ಎಲ್.ಎಸ್.ಎಸ್ ಯೋಜನೆಯಡಿ ರಾಜ್ಯದಲ್ಲಿ 53,695 ಅರ್ಜಿಗಳಿಗೆ ಮಾತ್ರ ಮಂಜೂರಾತಿ ದೊರೆತಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದಾಗ, ನಮ್ಮ ರಾಜ್ಯ ಹಿಂದುಳಿದಿದೆ. ಅದೇ ರೀತಿ ಪಾಲುದಾರಿಕೆಯಲ್ಲಿ ಕೈಗೆಟಕುವ ವಸತಿ ಯೋಜನೆಯಡಿ ಮಂಜೂರಾಗಿರುವ 3,46,414 ಪ್ರಕರಣಗಳ ಪೈಕಿ 1,16,168 ಪ್ರಕರಣಗಳಿಗೆ ಕಾರ್ಯಾದೇಶವನ್ನು ನೀಡಲಾಗಿದ್ದು, ಕೇವಲ 19,658 ಮನೆಗಳು ಮಾತ್ರ ಪೂರ್ಣಗೊಂಡಿವೆ. ಈ ಯೋಜನೆಯಡಿ ಬ್ಯಾಂಕಿನಿಂದ ನೀಡುವ ಸಾಲ ಪ್ರಕ್ರಿಯೆ ಪ್ರಾರಂಭವಾಗದಿರುವುದು ಯೋಜನೆಯ ಪ್ರಗತಿಗೆ ಪೂರಕವಾಗಿಲ್ಲ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಪಿಎಂ. ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳನ್ನು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರವನ್ನೂ ನೀಡಲಾಗುವುದು. ಈವರೆಗೆ 2,24,368 ಅರ್ಜಿಗಳನ್ನು ಯೋಜನೆಯಡಿ ಸ್ವೀಕರಿಸಲಾಗಿದ್ದು, ಕೇವಲ 66,423 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ರಾಜ್ಯದ ಬ್ಯಾಂಕುಗಳು ಶೇ 30 ರಷ್ಟು ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಿವೆ ಎಂದು ಗುಡುಗಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button