ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸ್ಮಾರ್ಟ್ ಸಿಟಿ ಯೋಜನೆಯಡಿ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಇದೀಗ ಲೋಕಾರ್ಪಣೆಗೊಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅಶೋಕ ನಗರದಲ್ಲಿರುವ ಈಜುಕೊಳ ಹಾಗೂ ವ್ಯಾಯಾಮಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ(ಕಚೇರಿ ಸಂಕೀರ್ಣ) ಮತ್ತು ಆಂಗ್ಲ ಮಾಧ್ಯಮ ಶಾಲೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.