*ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ: ಅಧಿಕಾರಿಗಳಿಗೆ ಬಂತು ಅಧಿಕೃತ ಇ-ಮೇಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ. ಈ ಸಂಬಂಧ ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ಬಂದಿರುವ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಗೆ ಸ್ಥಳಾಂತರಿಸುವ ಕುರಿತು ಇ-ಮೇಲ್ ಮೂಲಕ ಮಾಹಿತಿ ರವಾನಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಎಸ್ಕಾರ್ಟ್ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಯಾವುದೇ ಕ್ಷಣದಲ್ಲಿ ಬೆಳಗಾವಿಗೆ ಕರೆತರಬಹುದು ಎಂಬ ಚರ್ಚೆ ಜೈಲು ವಲಯದಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರ ಸ್ಥಳಾಂತರದ ವಿಚಾರ ಮುನ್ನೆಲೆಗೆ ಬಂದಿದೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.
ಆದರೆ, ಸ್ಥಳಾಂತರದ ಕುರಿತು ಅಧಿಕೃತವಾಗಿ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಪ್ರಜ್ವಲ್ ರೇವಣ್ಣ ಅವರನ್ನು ಹಿಂಡಲಗಾ ಜೈಲಿಗೆ ಯಾವಾಗ ಕರೆತರಲಾಗುತ್ತದೆ ಎಂಬುದರ ಬಗ್ಗೆಯೂ ಇನ್ನೂ ಸ್ಪಷ್ಟತೆ ಇಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




