ನಮ್ಮ ಕ್ಲಿನಿಕ್ ಪ್ರಾರಂಭಿಸಲು ಸಿದ್ಧತೆ ನಡೆಸಿ: ಆರೋಗ್ಯ ಇಲಾಖೆಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್
ಪ್ರಗತಿವಾಹಿನಿ ಸುದ್ದಿ: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.
ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಮ್ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.
15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳು ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಭ ನೀತಿಯನ್ನು ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ