ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನೆರೆ ಪರಿಹಾರ ಹೆಚ್ಚಳ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಸಿಎಂ ಬಿ ಎಸ್ ಯಡಿಯೂರಪ್ಪ ತುಮಕೂರಿನಲ್ಲಿ ಮಾಡಿದ ಮನವಿಗೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿಲ್ಲ ಎಂದು ಮೋದಿ ವಿರುದ್ಧ ಟೀಕಾಪ್ರಹಾರಗಾಳು ಆರಂಭವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಯಡಿಯೂರಪ್ಪ, ರಾಜ್ಯದ ಪ್ರಸಿದ್ದ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಮಂತ್ರಿಗಳಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ.
ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನವಾಗಿದೆ. ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ಪ್ರಧಾನಮಂತ್ರಿಗಳು ನಮ್ಮ ಬೇಡಿಕೆಗೆ ಮೌನವಹಿಸಿದ್ದರು. ಅವರು ಮುನಿಸಿಕೊಂಡಿದ್ದಾರೆ. ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ.
ಪ್ರಧಾನಮಂತ್ರಿಗಳು ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು – ಇದೆಲ್ಲವುಗಳಿಗೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಪ್ರಧಾನಮಂತ್ರಿಗಳಲ್ಲಿ ನಮ್ಮ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ.
ನಮ್ಮ ಎಲ್ಲ ಮನವಿಗೆ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ