*ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಒಟ್ಟು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಉಳಿದ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಬಸ್ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದರು. ಒಟ್ಟು 32 ಸೀಟ್ಗಳ ಬಸ್ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಬಸ್ನಲ್ಲಿ ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಸ್ನಲ್ಲಿ ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತೀಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್ ಸೇರಿದಂತೆ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ಇನ್ನು ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್ನಿಂದ ಹೊರ ಜಿಗಿದು ಬಚಾವ್ ಆಗಿದ್ದಾರೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಬಸ್ನಲ್ಲಿ ತೆರಳುತ್ತಿದ್ದ ಬೆಂಗಳೂರು ಮೂಲದ ಗಗನ ಶ್ರೀ, ರಕ್ಷಿತಾ ಹಾಗೂ ಗೋಕರ್ಣ ಮೂಲದ ರಶ್ಮಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

