Belagavi NewsBelgaum NewsElection NewsKannada NewsKarnataka NewsPolitics

ನಿಷೇಧಾಜ್ಞೆ ಜಾರಿ

ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ ರ ನಿಮಿತ್ಯ ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ಹಾಗೂ ಚಿಕ್ಕೋಡಿ ನಗರದ ಸಿ.ಟಿ.ಇ ಸೊಸೈಟಿ ಆರ್.ಡಿ.ಪಿ.ಯು ಕಾಲೇಜು ಚಿಕ್ಕೋಡಿ ಗಳಲ್ಲಿ ಜೂ.೪ ರಂದು ಮತ ಎಣಿಕೆ ಕಾರ್ಯವು ಜರುಗಲಿದ್ದು, ಮತ ಎಣಿಕೆ ಕಾರ್ಯದ ಪಾವಿತ್ರ್ಯತೆಯನ್ನುಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ೦೧-ಚಿಕ್ಕೋಡಿ ಲೋಕಸಭಾ ಮತಕ್ಷೇತ್ರ, ೦೨-ಬೆಳಗಾವಿ ಲೋಕಸಭಾ ಮತಕ್ಷೇತ್ರ ಹಾಗೂ ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಚನ್ನಮ್ಮನ ಕಿತ್ತೂರು ಮತ್ತು ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ ಜೂ.೩ ರಂದು ಸಂಜೆ ೫ ಗಂಟೆಯಿಂದ ಜೂ.೫ ರ ಬೆಳಿಗ್ಗೆ ೭ ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ೦೧ – ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ, ೦೨ – ಬೆಳಗಾವಿ ಲೋಕಸಭಾ ಮತಕ್ಷೇತ್ರದ ಹಾಗೂ ೧೨ – ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಚನ್ನಮ್ಮನ ಕಿತ್ತೂರು ಮತ್ತು ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ) ೦೫ ಕ್ಕಿಂತ ಹೆಚ್ಚು ಜನರು ಸೇರುವುದು, ಮೆರವಣಿಗೆ ಅಥವಾ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಬೆಳಗಾವಿ ನಗರದ ರಾಣಿ ಪಾರ್ವತಿದೇವಿ (ಆರ್.ಪಿ.ಡಿ) ಕಾಲೇಜು ತಿಲಕವಾಡಿ ಹಾಗೂ ಚಿಕ್ಕೋಡಿ ನಗರದ ಸಿ.ಟಿ.ಇ ಸೊಸೈಟಿ ಆರ್.ಡಿ.ಪಿ.ಯು ಕಾಲೇಜು ಚಿಕ್ಕೋಡಿ ಮತ ಎಣಿಕೆ ಕೇಂದ್ರಗಳಲ್ಲಿ ಮತ್ತು ಅವುಗಳ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಚುನಾವಣಾ ನಿರತ ಅಧಿಕಾರಿ/ಸಿಬ್ಬಂದಿಗಳನ್ನು ಹೊರತುಪಡಿಸಿ ೦೫ ಕ್ಕಿಂತ ಹೆಚ್ಚು ಜನರು ಸೇರುವುದನ್ನು, ಮೆರವಣಿಗೆ ಅಥವಾ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು.
ಸದರಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತಿಯ ಕಲಂ ೧೮೮ ರ ಪ್ರಕಾರ ಕ್ರಮವನ್ನ ಜರುಗಿಸಲಾಗಿಸುವುದು ಎಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button