*ಬೆಳಗಾವಿಯಲ್ಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು*: *ಸಿಸಿಬಿ ಪೊಲೀಸರ ದಾಳಿ, ನಾಲ್ವರು ಯುವತಿಯರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾದ ಆರ್‌ಪಿಡಿ ಕ್ರಾಸ್‌ನಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಆರ್‌ಪಿಡಿ ಕ್ರಾಸ್‌ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ನಾಯಕ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದೆ.
ದಾಳಿಯ ಸಂದರ್ಭದಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಈ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ದಾಳಿ ವೇಳೆ ಗುಜರಾತ್ ಹಾಗೂ ಮುಂಬೈ ಮೂಲದ ಯುವತಿಯರು ಸೇರಿದಂತೆ ಒಟ್ಟು ನಾಲ್ವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಇನ್ನು ಈ ಅಕ್ರಮ ದಂಧೆಯ ಹಿಂದೆ ಸ್ಪಾ ಮಾಲೀಕ ಹಾಗೂ ಮ್ಯಾನೇಜರ್ ಪಾತ್ರವಿರುವ ಶಂಕೆಯ ಹಿನ್ನೆಲೆಯಲ್ಲಿ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಲೂನ್ ಹೆಸರಿನಲ್ಲಿ ನಡೆಯುತ್ತಿದ್ದ ಈ ಚಟುವಟಿಕೆಯ ಜಾಲ ಹಾಗೂ ಯುವತಿಯರನ್ನು ಹೊರರಾಜ್ಯಗಳಿಂದ ಕರೆತಂದಿರುವ ಹಿಂದಿನ ಉದ್ದೇಶದ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಪ್ರಕರಣದ ಮುಂದಿನ ತನಿಖೆಗಾಗಿ ಸಿಸಿಬಿ ಪೊಲೀಸರು ಪ್ರಕರಣವನ್ನು ಟಿಳಕವಾಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ದಂಧೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಗರದ ವಾಣಿಜ್ಯ ಪ್ರದೇಶಗಳಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ನಡೆಯುವ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.



