*ಶಿವಸೇನೆ ಸಂಸದನ ವಿರುದ್ಧ ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ನಡೆಸಿದೆ.
ಇಂದು ಬೆಳಗಾವಿ ನಗರದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅಣಕುಶವಯಾತ್ರೆ ನಡೆಸಲಾಯಿತು.
ಮಹಾರಾಷ್ಟ್ರದ ನಾಯಕರು ಕಳೆದ ಐವತ್ತು ವರ್ಷಗಳಿಂದ ಬೆಳಗಾವಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. ನಮ್ಮ ನಾಡಿನ ಜನ ರಾಜ್ಯೋತ್ಸವ ಆಚರಣೆ ಮಾಡುವ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡುವದು, ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಮರಾಠಿ ಮೇಳಾವ್ ಮಾಡುವ ನಾಡದ್ರೋಹಿ ಎಂಈಎಸ್ ನಾಯಕರು ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಮಾಡಿಸಿ, ಬೆಳಗಾವಿಯ ಭಾಷಾ ಬಾಂಧವ್ಯಕ್ಕೆ ಧಕ್ಕೆ ತರುತ್ತಲೇ ಬಂದಿದ್ದಾರೆ.
ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬಂದು ಇಲ್ಲಿಯ ಭಾಷಾ ಬಾಂಧವ್ಯಕ್ಕೆ ಧಕ್ಕೆ ತಂದು ಭಾರತದ ಒಕ್ಕೂಟದ ವ್ಯವಸ್ಥೆಯನ್ನೇ ಹಾಳು ಮಾಡುತ್ತಿರುವ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸಂಸದ ಧೈರ್ಯಶೀಲ ಮಾನೆ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಸದ ಜಗದೀಶ್ ಶೆಟ್ಟರ್ ಗೆ ಮನವಿ ಮಾಡಿದರು.
ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾವುಗಳು ಸಂಸತ್ತಿನಲ್ಲಿ ಧ್ವನಿ ಎತ್ತದಿದ್ದರೆ, ಕೇಂದ್ರದ ಗೃಹ ಸಚಿವರಿಗೆ ಈ ಕುರಿತು ಲಿಖಿತ ದೂರು ನೀಡದಿದ್ದರೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಿಮ್ಮ ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸುವದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.


