*ಖಾನಾಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ವೇಳೆ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ವಸತಿ ರಹಿತ ಕುಟುಂಬಗಳು ಸ್ವಂತ ಮನೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ಖಾನಾಪುರದಲ್ಲಿ ಪ್ರತಿಭಟನೆ ನಡೆಸಿದರು.
ಖಾನಾಪುರ ಪಟ್ಟಣದ ಲೋಕಮಾನ್ಯ ಟಿಳಕ ಭವನದಲ್ಲಿ ಇಂದು ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗಮಿಸುತ್ತಿದ್ದಂತೆ ನೂರಾರು ವಸತಿ ರಹಿತ ಕುಟುಂಬಗಳು ಕೈಯಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಹಲವು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆ ನಿರ್ಮಿಸಿಕೊಳ್ಳಲು ಆರ್ಥಿಕವಾಗಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಮನೆ ನಿರ್ಮಿಸಿಕೊಡಬೇಕು ಎಂದು ಸಚಿವರ ಮುಂದೆ ಮನವಿ ಮಾಡಿದರು.
ಪ್ರತಿಭಟನಾಕಾರರಾದ ನೀಲವ್ವ ಬೀದರಬಾವಿ ಮಾತನಾಡಿ, ಕಳೆದ 25 ವರ್ಷಗಳಿಂದ ಖಾನಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಸ್ವಂತ ಮನೆ ಕಟ್ಟಿಸಿಕೊಳ್ಳುವಷ್ಟು ಆರ್ಥಿಕ ಶಕ್ತಿ ಇಲ್ಲ. ನಮ್ಮಂತೆಯೇ ಸಾವಿರಾರು ಕುಟುಂಬಗಳು ಇದೇ ಸಮಸ್ಯೆ ಎದುರಿಸುತ್ತಿವೆ. ಸರ್ಕಾರ ಮನೆ ನಿರ್ಮಿಸಿಕೊಟ್ಟರೆ ನೆಮ್ಮದಿಯಿಂದ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಇರ್ಫಾನ್ ತಾಳಿಕೋಟಿ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಕೂಲಿ ಕೆಲಸಕ್ಕಾಗಿ ಖಾನಾಪುರಕ್ಕೆ ಬಂದಿರುವ ಸಾವಿರಾರು ಕುಟುಂಬಗಳು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿವೆ. ಕಡಿಮೆ ಆದಾಯದಲ್ಲಿ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಸೇರಿದಂತೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸ್ವಂತ ಮನೆ ನಿರ್ಮಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಕಳೆದ 13 ವರ್ಷಗಳಿಂದ ಖಾನಾಪುರದಲ್ಲಿ ಸರ್ಕಾರದಿಂದ ಒಂದೇ ಒಂದು ಮನೆ ನಿರ್ಮಿಸಿಕೊಟ್ಟಿಲ್ಲ. ಈಗಾಗಲೇ ಮನೆಗಾಗಿ ಸುಮಾರು 1,400 ಅರ್ಜಿಗಳು ಬಂದಿವೆ. ಹುಬ್ಬಳ್ಳಿಯಲ್ಲಿ ಬಡವರಿಗೆ ಅಪಾರ್ಟ್ಮೆಂಟ್ ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿಕೊಟ್ಟಿರುವಂತೆ, ಖಾನಾಪುರದಲ್ಲೂ ವಸತಿ ರಹಿತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಬೇಕು ಎಂದು ಇರ್ಫಾನ್ ತಾಳಿಕೋಟಿ ಒತ್ತಾಯಿಸಿದರು.
ಸರ್ಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡು ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




