ಪರೀಕ್ಷೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿ: ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕಾರ್ಮೆಲ್ ಶಿಕ್ಷಣ ಸಂಸ್ಥೆಯಲ್ಲಿ ಪಿಇಯುಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕರು ಕಾರ್ಮೆಲ್ ಶಿಕ್ಷಣ ಸಂಸ್ಥೆ ಮೇಲೆ ಶಿಸ್ತು ಕ್ರಮಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ನಡೆಯಬೇಕಿದ್ದ ಜೀವಶಾಸ್ತ್ರ ವಿಷಯದ ಪರೀಕ್ಷೆಯನ್ನು ನವೆಂಬರ್ 19ಕ್ಕೆ ಮುಂದೂಡಲಾಗಿದೆ. ನವೆಂಬರ್ 6ರಿಂದ 16ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿತ್ತು. ಪ್ರಶ್ನೆ ಪತ್ರಿಕೆಯನ್ನು ನೋಡಲ್ ಅಧಿಕಾರಿ ಮೂಲಕ ಹಂಚಲಾಗಿದೆ. ಜೀವಶಾಸ್ತ್ರ ಪರೀಕ್ಷಾ ದಿನಾಂಕಕ್ಕಿಂತ ಮುಂಚೆಯೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ. ಇಂದು ನಡೆಯಬೇಕಿದ್ದ ಜೀವಶಾಸ್ತ್ರ ಪರೀಕ್ಷೆ ಎರಡು ದಿನಗಳ ಹಿಂದೆಯೇ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿ ನ.19ಕ್ಕೆ ನಿಗದಿ ಮಾಡಲಾಗಿದೆ.
ಇನ್ನು ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ತನಿಖೆಯಿಂದ ಬಹಿರಂಗವಾಗಿದೆ. ಹಾಗಾಗಿ ಕಾರ್ಮೆಲ್ ಕಾಲೇಜು ಸಂಸ್ಥೆ ವಿರುದ್ಧ ಶಿಸ್ತು ಕ್ರಮಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಶಂಕರಪ್ಪ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ