ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಶೀಘ್ರ ಮುಕ್ತಿ; ಕಾಂಗ್ರೆಸ್ ಗೆ ಮತ ನೀಡಿ ರಾಜ್ಯದಲ್ಲಿ ಜನತೆಯ ಸರಕಾರ ಅಧಿಕಾರಕ್ಕೆ ತನ್ನಿ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಠಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯ ಮಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬುಧವಾರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಜನರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಮುಕ್ತಿ ನೀಡಲಿವೆ. ಜೊತೆಗೆ ಪ್ರಣಾಳಿಕೆಯಲ್ಲಿ ಸಹ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಲಾಗಿದೆ. ರೈತರಿಗಾಗಿ, ಯುವಕರಿಗಾಗಿ, ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ಹೆಬ್ಬಾಳಕರ್ ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಪ್ರೋತ್ಸಾಹ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು. ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಗಳನ್ನು 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ರೈತರ ಹಿತ ಕಾಯಲು ಸಹ ಕಾಂಗ್ರೆಸ್ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ ಎಂದು ಅವರು ವಿವರಿಸಿದರು.

ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗಲೆಲ್ಲ ಬಡವರಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆದರೆ ಬಿಜೆಪಿ ಸರಕಾರ ಬಂದ ಮೇಲೆ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡಿಲ್ಲ. ಉದ್ಯೋಗ ನೀಡುವ ಯೋಜನೆ ಇಲ್ಲ, ಮನೆ ನಿರ್ಮಾಣವಾಗಿಲ್ಲ, ಕೇವಲ ಭಾವನಾತ್ಮಕವಾಗಿ ಪ್ರಚೋದನೆ ನೀಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಹಾಗಾಗಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನಿಮ್ಮದೇ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಹೆಬ್ಬಾಳಕರ್ ವಿನಂತಿಸಿದರು.
ಬ್ಯಾಲೆಟ್ ಯುನಿಟ್ ನಲ್ಲಿ 4ನೇ ನಂಬರ್ ನಲ್ಲಿರುವ ನನ್ನ ಹೆಸರು ಫೋಟೋ ಮುಂದೆ ಇರುವ ಬಟನ್ ಒತ್ತುವ ಮೂಲಕ ಹಸ್ತದ ಚಿಹ್ನೆಗೆ ಮತ ನೀಡಿ. ಮಂದಿನ 5 ವರ್ಷಗಳಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ಹಲವಾರು ಕನಸಿನ ಯೋಜನೆಗಳನ್ನು ಜಾರಿಗೊಳಿಸುತ್ತೇನೆ. ನಿಮ್ಮ ನಿರೀಕ್ಷೆಗಳನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

ಅಪಾರ ಜನ ಬೆಂಬಲ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೂರ್ವ ಭಾಗದಂತೆ ಪಶ್ಚಿಮ ಭಾಗದಲ್ಲೂ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿ ಊರಲ್ಲಿ ಸಾಗರೋಪಾದಿಯಲ್ಲಿ ಜನರು ರೋಡ್ ಶೋ ಗಳಲ್ಲಿ, ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಬಂದರೆಂದರೆ ಮನೆ ಮಗಳೇ ಬಂದಂತೆ ಆರತಿ ಬೆಳಗಿ, ಜೈ ಘೋಷಗಳನ್ನು ಮೊಳಗಿಸಿ ಸ್ವಾಗತಿಸಲಾಗುತ್ತಿದೆ. ಹಿರಿಯರು ತಲೆಯ ಮೇಲೆ ಕೈ ಇಟ್ಟು ಆಶಿರ್ವಾದ ಮಾಡುತ್ತಿದ್ದಾರೆ. ಯುವತಿಯರು, ಮಹಿಳೆಯರು ಕೈ ಹಿಡಿದು ಪ್ರೀತಿ ತೋರಿಸುತ್ತಿದ್ದಾರೆ.
ಮೃಣಾಲ ಹೆಬ್ಬಾಳಕರ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ