ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತ-ಚೀನಾ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಭಾರತ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಕಳೆದ ಜೂನ್.15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿತ್ತು. ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಏರ್‌ಬೇಸ್‌ಗೆ ತೆರಳಿ ಸೈನಿಕರಿಗೆ ಧೈರ್ಯ ತುಂಬಿದ್ದರು.
ಇದರ ಬೆನ್ನಲ್ಲೇ ಎರಡು ದಿನಗಳ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಲಡಾಖ್ ಗೆ ಭೇಟಿ ನೀಡಿ ಮಾತನಾಡಿದ್ದರು. ಇದೀಗ ರಾಜನಾಥ್ ಸಿಂಗ್ ಭಾಷಣವನ್ನು ಟ್ಯಾಗ್ ಮಾಡಿ ಕಿಡಿಕಾರಿರುವ ರಾಹುಲ್ ಗಾಂಧಿ, ಗಡಿ ತಕರಾರು ಕುರಿತ ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದ ವರ್ತನೆಯಿಂದ ಚೀನಾ ದೇಶ ಮತ್ತಷ್ಟು ಧೈರ್ಯಗೊಳ್ಳಲಿದೆ. ಪರಿಣಾಮ ಭಾರತ ದೊಡ್ಡ ಬೆಲೆ ತೆರಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಗಡಿಯಲ್ಲಿನ ಸಮಸ್ಯೆಯ ಪರಿಹಾರಕ್ಕಾಗಿ ಚೀನಾದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಖಾತರಿ ಇಲ್ಲ ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ