
ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿ ಗಾಯಗೊಳಿಸಿದ್ದಾರೆಂದು ಬಿಜೆಪಿ ಆರೋಪಿಸಿದೆ.
ಗಂಭೀರವಾಗಿ ಗಾಯಗೊಂಡಿರುವ ಪತ್ರಕರ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಪತ್ರಕರ್ತೆ ರಿಚಾ ಪರಾಶರ್ ಎಂದು ತಿಳಿದುಬಂದಿದೆ. ಈ ಘಟನೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತನಿಖೆಗೆ ಒತ್ತಾಯಿಸಿದೆ. ಕಾಂಗ್ರೆಸ್ ಇದನ್ನು ಬಿಜೆಪಿಯ ಸುಳ್ಳು ಆರೋಪ ಎಂದು ಕಿಡಿಕಾರಿದೆ.
ಆರೋಪಗಳ ಕುರಿತು ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷದಿಂದ ತಕ್ಷಣದ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಬಿಜೆಪಿ ನಾಯಕ ರಾಜೇಶ್ ಭಾಟಿಯಾ ಮಾತನಾಡಿ, ರಾತ್ರಿ 8.30ರ ಸುಮಾರಿಗೆ ಪತ್ರಕರ್ತೆಯ ಸಹೋದರಿ ರಾಜಿಂದರ್ ನಗರದಲ್ಲಿರುವ ನನ್ನ ಕಚೇರಿಗೆ ಬಂದು ನೆರವು ಕೋರಿದರು. ತಮ್ಮ ಸಹೋದರಿ ಗರ್ಭಿಣಿಯಾಗಿದ್ದು, ಕರ್ತವ್ಯದ ವೇಳೆ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದರಿಂದ ಗಾಯಗೊಂಡಿದ್ದು ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದರು ಎಂದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಶಾಸಕ ಉಮಾಂಗ್ ಬಜಾಜ್, ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಮತ್ತು ರಾಜೇಶ್ ಭಾಟಿಯಾ ಆಸ್ಪತ್ರೆಗೆ ಧಾವಿಸಿ ಪತ್ರಕರ್ತೆಯ ಆರೋಗ್ಯ ವಿಚಾರಿಸಿದರು. ಪತ್ರಕರ್ತೆ ರಿಚಾ ಪರಾಶರ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ವೀಡಿಯೊವನ್ನು ಪ್ರದೀಪ್ ಭಂಡಾರಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದು, ಮೂರು ತಿಂಗಳ ಗರ್ಭಿಣಿಯೊಬ್ಬರು ತನ್ನ ವೃತ್ತಿಪರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಕೆಳಕ್ಕೆ ಕೆಡವಲಾಗಿದೆ. ಮಹಿಳಾ ಸುರಕ್ಷತೆ ಬಗ್ಗೆ ಭಾಷಣ ಬಿಗಿಯುವ ನಾಯಕರ ಅಸಲಿ ಮುಖವಾಡ ಕಳಚಿಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



