ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ- ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿ.ಪಿ.ಆರ್ ಮಾಡಲಾಗಿದ್ದರೂ ಅದನ್ನು ಪ್ರಶ್ನಿಸಲಾಗಿದೆ. ಆದಷ್ಟು ಬೇಗ ಆ ತಡೆಯಾಜ್ಞೆಯನ್ನು ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದರು.
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗನೆ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಈ ಕುರಿತು ಹಿರಿಯ ಅಧಿಕಾರಿಗಳ ಜತೆ ಚರ್ಚೆ ಮಾಡಿ ತ್ವರಿತಗತಿಯಲ್ಲಿ ಮುಗಿಸುವಂತೆ ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ