*ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮಳೆ; ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕುಗೊಳ್ಳುವ ಮುನ್ಸೂಚನೆ ದೊರೆತಿದೆ. ಅಕ್ಟೋಬರ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗಬಹುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಅಕ್ಟೋಬರ್ 3ರಂದು ಕೂಡ ಕರಾವಳಿ ಕರ್ನಾಟಕದಲ್ಲಿ ಹಲವು ಕಡೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಈ ಅವಧಿಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ತಲಾ 4 ಸೆಂ.ಮೀ. ಮಳೆ ದಾಖಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ಥಳೀಯ ಹವಾಮಾನ ಮಾಹಿತಿಯನ್ನು ಗಮನಿಸುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



