
ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿ, ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ರಾಜೀವ್ ಗೌಡ ನಿಂದಿಸಿದ್ದ ಹಾಗೂ ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪೌರಾಯುಕ್ತೆ ಅಮೃತಾ ಗೌಡ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಠಾಣೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರು. ಎಫ್ ಐ ಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ರಾಜೀವ್ ಗೌಡ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಕೂಡ ರಾಜೀವ್ ಗೌಡರನ್ನು ಅಮಾನತುಗೊಳಿಸಿತ್ತು.
ಇದೀಗ ರಾಜೀವ್ ಗೌಡ ಅವರನ್ನು ಕೇರಳದ ಗಡಿ ಭಾಗದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ನ್ನು ತೆರವು ಮಾಡಿದ ವಿಚಾರಕ್ಕೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ, ರಾಜೀವ್ ಗೌಡ ಧಮ್ಕಿ ಹಾಕಿದ್ದರು.



