
ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಸಕಲ ಪ್ರಯತ್ನ ನಡೆಸಿರುವ ರಾಜ್ಯ ಬಿಜೆಪಿ ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದು, ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿ ಮಾಡಿದೆ.
ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಇದೀಗ ರಾಮಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 19ರಂದು ಶಂಕುಸ್ಥಾಪನೆ ನೆರವೇರಲಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಮಾರ್ಚ್ 19ರಂದು ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಮತಬೇಟೆಗೆ ಮತ್ತಷ್ಟು ವೇಗ ನೀಡಲಿದೆ.




