ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಅನಿವಾರ್ಯ ಕಾರಣಗಳಿಂದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ತಿಳಿಸಿದ್ದಾರೆ.
ರಾಜೀನಾಮೆ ಬಳಿಕ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ನಾಯಕರ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. ಪಕ್ಷದಲ್ಲಿ 40 ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸಮಾಡಿದರೂ ಸರಿಯಾದ ಅವಕಾಶ ಸಿಗಲಿಲ್ಲ. ಪೂರ್ಣಾವಧಿಗೂ ಅವಕಾಶ ಇಲ್ಲ. ಕಾರ್ಯಕರ್ತರನ್ನೂ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಜೆಡಿಎಸ್ ದಿನೇ ದಿನೇ ರಾಜಕೀಯ ಗುಣ ಕಳೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಬೇರೆ ಪಕ್ಷಕ್ಕೆ ಹೋಗುವ ಪ್ರಯತ್ನವಿದೆ. ಆದರೆ ಈ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಸದ್ಯಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ನನ್ನ ಭಾವನೆಗೆ ತಕ್ಕಂತೆ ಪಕ್ಷ ಆಯ್ಕೆ ಮಾಡಿಕೊಳ್ಳುತ್ತೇನೆ. ಜೆಡಿಎಸ್ ಪಕ್ಷದಿಂದ ನನಗೆ ಬೇಸರ ಆಗಿದೆ ಎಂದು ತಿಳಿಸಿದರು.
ಈ ಹಿಂದೆ ರಮೇಶ್ ಬಾಬು ಆಗ್ನೇಯ ಪದವೀಧರರ ಕ್ಷೇತ್ರದ ಎಂಎಲ್ಸಿ ಆಗಿದ್ದರು. ಈಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಜೆಡಿಎಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ