*8 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ರಸ್ತೆ ತಡೆ ನಡೆಸಿ, ವಾಹನಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉದಯಪುರದಲ್ಲಿ ನಡೆದಿದೆ. ಹೊಲದಬಳಿ ಇದ್ದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ.
ಬಾಲಕಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದ ದುರುಳ ಬಾಲಕಿ ಬಾಯಿಕಟ್ಟಿ ಪೊದೆಗೆ ಕರೆದೊಯ್ದು ಹೇಯಕೃತ್ಯವೆಸಗಿದ್ದಾನೆ. ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ದಬೋಕ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ತಕ್ಷಣ ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ ಅಲ್ಲದೇ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಗ್ರಾಮಸ್ಥರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಪೊಲೀಸರು ಯತ್ನ ನಡೆಸಿದ್ದಾರೆ. ಸಮೀಪದ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.