*ರೇಣುಕಾ ಸ್ವಾಮಿ ಕೇಸ್*: *ಕೋರ್ಟ್ ಕಲಾಪದ ವಿಡಿಯೋ ಲೀಕ್ಗೆ ಸೋಶಿಯಲ್ ಮೀಡಿಯಾಗೆ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ ನ್ಯಾಯಾಲಯದಲ್ಲಿ ಮುಂದುವರಿದಿರುವ ಬೆನ್ನಲ್ಲೇ, ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರ ಹೇಳಿಕೆಗೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ.
ಪ್ರದೋಷ್ ಅವರನ್ನು ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ. ಸೆಪ್ಟೆಂಬರ್ 28ರಿಂದ ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ವಿಚಾರಣೆ ಹಲವು ದಿನಗಳ ಕಾಲ ಮುಂದುವರಿದಿದೆ.
ಈ ನಡುವೆ ನ್ಯಾಯಾಲಯದ ಕಲಾಪಕ್ಕೆ ಸಂಬಂಧಿಸಿದ ದೃಶ್ಯಗಳು, ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬಗ್ಗೆ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.
ನ್ಯಾಯಾಲಯದ ವಿಚಾರಣೆಯ ದೃಶ್ಯಗಳು, ಆಡಿಯೋ ಅಥವಾ ವಿಡಿಯೋ ರೆಕಾರ್ಡಿಂಗ್ಗಳನ್ನು ಅನುಮತಿಯಿಲ್ಲದೆ ದಾಖಲಿಸಿ ಮರುಪ್ರಸಾರ ಮಾಡದಂತೆ ಹಾಗೂ ಹಂಚಿಕೆ ಮಾಡದಂತೆ ಕಠಿಣ ನಿರ್ದೇಶನ ನೀಡಲಾಗಿದೆ. ವೈರಲ್ ಆಗಿದ್ದ ವಿಚಾರಣೆಗೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೋಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ.
ಮುಂದಿನ ದಿನಗಳಲ್ಲಿ ಯಾರಾದರೂ ನ್ಯಾಯಾಲಯದ ಕಲಾಪವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಂಗ ನಿಂದನೆ ಸೇರಿದಂತೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಇನ್ನು, ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಂದಿದೆ. ಅಕ್ಟೋಬರ್ 7ರಂದು ಅರ್ಜಿಯ ವಿಚಾರಣೆ ನಿಗದಿಯಾಗಿತ್ತು.
ಪ್ರದೋಷ್ಗೆ ಮಾಫಿ ಸಾಕ್ಷಿ ಸ್ಥಾನ ನೀಡಿರುವ ವಿಚಾರವನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ಎತ್ತಿಹಿಡಿದಿದ್ದು, ಆರೋಪಿಗೆ ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ವಿರೋಧಿಸುವ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿತ್ತು. ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಪರ ವಕೀಲರಿಗೆ ಪ್ರದೋಷ್ ಅವರನ್ನು ಪ್ರತಿಪ್ರಶ್ನೆ ಮಾಡುವ ಅವಕಾಶವಿರುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
ಹೀಗಾಗಿ ಒಂದೆಡೆ ಪ್ರದೋಷ್ ಸಾಕ್ಷ್ಯ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದ್ದರೆ, ಮತ್ತೊಂದೆಡೆ ಆ ಹೇಳಿಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಬೆಳವಣಿಗೆ ಪ್ರಕರಣದ ಮುಂದಿನ ಕಾನೂನು ಹಂತದ ಮೇಲೆ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




