Belagavi NewsKarnataka NewsLatest

*ಪಾಲಿಕೆ ಸಾಮಾನ್ಯ ಸಭೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್*

ಮೂರು ತಿಂಗಳ ಬಳಿಕ ಇಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂರು ತಿಂಗಳ ಬಳಿಕ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಇಂದು ನಡೆಯಲಿದ್ದು, ಸಭೆಗೂ ಮುನ್ನವೇ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.


ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕು ಎಂದು ಕಳೆದ ಮೂರ್ನಾಲ್ಕು ತಿಂಗಳಿಂದ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಪಾಲಿಕೆ ಠರಾವು ಸ್ವೀಕರಿಸಲು ವಿಳಂಬ ಮಾಡುತ್ತಿದೆ ಎಂಬುದು ಹೋರಾಟಗಾರರ ಆರೋಪವಾಗಿದೆ.


ಕಳೆದ ಪಾಲಿಕೆ ಸಭೆಯಲ್ಲಿ ಕರ್ನಾಟಕ ಪರ ಠರಾವು ಸ್ವೀಕರಿಸುವ ಮುನ್ನ ರಾಜ್ಯ ಸರ್ಕಾರದ ಅಭಿಪ್ರಾಯ ಪಡೆಯಲು ನಿರ್ಧರಿಸಲಾಗಿತ್ತು. ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿರುವ ಹಿನ್ನೆಲೆಯಲ್ಲಿ ಠರಾವು ಸ್ವೀಕಾರದ ವಿಚಾರದಲ್ಲಿ ಪಾಲಿಕೆ ಎಚ್ಚರಿಕೆ ವಹಿಸುತ್ತಿದೆ ಎನ್ನಲಾಗುತ್ತಿದೆ.


ಇಂದು ಸಾಮಾನ್ಯ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಅಂಗೀಕರಿಸಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.


ಪಾಲಿಕೆ ಸುತ್ತ ಬಿಗಿ ಭದ್ರತೆ
ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಾಲಿಕೆ ಕಚೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸಿಪಿ ಸಂತೋಷ ಸತ್ಯನಾಯಕ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


ಡಿಸಿಪಿ ನಾರಾಯಣ ಬರಮನಿ ಹಾಗೂ ಎಸಿಪಿ ಸಂತೋಷ ಸತ್ಯನಾಯಕ್ ಅವರು ಪಾಲಿಕೆ ಕಚೇರಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.
ಇದೇ ವೇಳೆ ಮೂರು ತಿಂಗಳ ಬಳಿಕ ನಡೆಯುತ್ತಿರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆಯುವ ಸಾಧ್ಯತೆಯೂ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button