ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಧೀನ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜು ಮತ್ತು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಬೇಕೆಂದು ಒತ್ತಾಯಿಸಿ ಬುಧವಾರ ಆರ್‍ಸಿಯು ಕುಲಪತಿ ರಾಮಚಂದ್ರೇಗೌಡರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಆರ್‍ಸಿಯು ಘಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಆವರಣ, ವಿಜಯಪುರ, ಬಾಗಲಕೋಟೆ, ಜಮಖಂಡಿಗಳ ಸ್ನಾತಕೋತ್ತರ ಕೇಂದ್ರಗಳು ಹಾಗೂ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ 80ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಯುಜಿಸಿ ನಿಯಮಾವಳಿ ಪ್ರಕಾರ ಗೌರವಧನವನ್ನು ಹೆಚ್ಚಿಸಬೇಕು ಮತ್ತು ಕಳೆದ ಶೈಕ್ಷಣಿಕ ವರ್ಷದಲ್ಲಿನ ಪರೀಕ್ಷಾ ಸಂಬಂಧಿತ ಕಾರ್ಯ ಮತ್ತು ಇತರೆ ವಿವಿ ನಿಗದಿತ ಪಡಿಸಿದ ಕಾರ್ಯಗಳನ್ನು ನಿರ್ವಹಿಸಿದ ಅತಿಥಿ ಉಪನ್ಯಾಸಕರ ಬಾಕಿ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಿನ ಅವಧಿಯಲ್ಲಿ ಕೋವಿಡ್ ಸೇವೆ ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ವೇತನವನ್ನು ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ. ಅದೆ ರೀತಿ ರಾಣಿ ಚನ್ನಮ್ಮ ವಿವಿಯ ಅತಿಥಿ ಉಪನ್ಯಾಸಕರಿಗೂ ಕೂಡಾ ಮೂರು ತಿಂಗಳ ವೇತನ ನೀಡಬೇಕು ಮತ್ತು ಕಳೆದ ವರ್ಷ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಈ ವರ್ಷ ಮುಂದುವರೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕೆಆರ್ ಎಂಎಸ್‍ಎಸ್ ಆರ್‍ಸಿಯು ಘಟಕದ ಕಾರ್ಯದರ್ಶಿ ಬಿ.ಎಂ. ಬಡಿಗೇರ, ಡಾ. ಎಸ್.ಬಿ. ರಾಯನಗೌಡರ್, ಮಹಾದೇವ ಧರಿಗೌಡರ ಮತ್ತು ಸಚಿನ ಹಿರೇಮಠ ಇನ್ನಿತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ