Belagavi NewsBelgaum NewsLatestPolitics

*ಬಸ್ತವಾಡ, ಚಂದನ ಹೊಸೂರು ಗ್ರಾಮಗಳಲ್ಲಿ ₹4.80 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ; ಸುಗಮ ಸಂಚಾರಕ್ಕೆ ಮಹತ್ವ: ಲಕ್ಷ್ಮೀ ಹೆಬ್ಬಾಳಕರ್


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮಗಳ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ನಿರಂತರ ಪ್ರಯತ್ನ ನಡೆಸುತ್ತಿದ್ದು, ಇದೀಗ ಬಸ್ತವಾಡ (ಹಲಗಾ) ಹಾಗೂ ಚಂದನ ಹೊಸೂರು ಗ್ರಾಮಗಳಲ್ಲಿ ಒಟ್ಟು ಸುಮಾರು ₹4.80 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.


ಬಸ್ತವಾಡ (ಹಲಗಾ) ಗ್ರಾಮದಲ್ಲಿ ಸುಮಾರು ₹2.40 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣ ಹಾಗೂ ಗ್ರಾಮದ ವಿವಿಧ ಭಾಗಗಳಲ್ಲಿ ಪೆವರ್ಸ್ ಅಳವಡಿಸುವ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.


ಅದೇ ರೀತಿ, ಚಂದನ ಹೊಸೂರು ಗ್ರಾಮದಲ್ಲಿ ಸುಮಾರು ₹2.40 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರಾಮದೊಳಗಿನ ವಿವಿಧ ರಸ್ತೆಗಳಿಗೆ ಪೆವರ್ಸ್ ಅಳವಡಿಸುವ ಕಾಮಗಾರಿಗೂ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.


ಈ ಎರಡೂ ಗ್ರಾಮಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಂದ ಗ್ರಾಮಸ್ಥರ ದೈನಂದಿನ ಸಂಚಾರ ಮತ್ತಷ್ಟು ಸುಗಮವಾಗಲಿದೆ. ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅನುಕೂಲವಾಗುವುದರ ಜತೆಗೆ, ಗ್ರಾಮಗಳ ಒಳಗಿನ ಸಂಪರ್ಕ ವ್ಯವಸ್ಥೆ ಸುಧಾರಿಸಲಿದೆ. ಉತ್ತಮ ರಸ್ತೆಗಳಿಂದ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೂ ಹೊಸ ವೇಗ ದೊರೆಯಲಿದೆ.


ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಉತ್ತಮ ರಸ್ತೆ ಹಾಗೂ ಮೂಲಸೌಕರ್ಯ ಅತ್ಯಂತ ಅಗತ್ಯ. ಗ್ರಾಮೀಣ ಭಾಗದ ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಜನರ ಬಹುದಿನಗಳ ಬೇಡಿಕೆ ಹಾಗೂ ಅಗತ್ಯಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.


ಬಸ್ತವಾಡ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಯ ಜತೆಗೆ ಚರಂಡಿ ವ್ಯವಸ್ಥೆಯ ಸುಧಾರಣೆಗೂ ಆದ್ಯತೆ ನೀಡಲಾಗುತ್ತಿದೆ. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸುವುದರಿಂದ ಮನೆಗಳಿಗೆ ನೀರು ನುಗ್ಗುವ ಸಮಸ್ಯೆ ಹಾಗೂ ರಸ್ತೆಗಳ ಮೇಲೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುವ ಪರಿಸ್ಥಿತಿಯನ್ನು ನಿವಾರಿಸಲು ಸಾಧ್ಯವಾಗಲಿದೆ. ಇದರಿಂದ ಗ್ರಾಮಸ್ಥರಿಗೆ ಮಳೆಗಾಲದಲ್ಲಿಯೂ ಹೆಚ್ಚಿನ ಅನುಕೂಲವಾಗಲಿದೆ ಎಂದರು.


ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಜನರ ದೈನಂದಿನ ಬದುಕಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರು ನೀಡುತ್ತಿರುವ ಪ್ರೀತಿ, ವಿಶ್ವಾಸ ಹಾಗೂ ಸಹಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಗ್ರಾಮಗಳ ಅಭಿವೃದ್ಧಿಯಲ್ಲಿ ಜನರ ಸಹಭಾಗಿತ್ವವೂ ಮಹತ್ವದ್ದಾಗಿದ್ದು, ಹಿರಿಯರು, ಯುವಕರು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ನೀಡುತ್ತಿರುವ ಸಹಕಾರ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಬಲ ನೀಡುತ್ತಿದೆ. ಮುಂದೆಯೂ ಇದೇ ರೀತಿಯ ಸಹಕಾರ ಇರಲಿ ಎಂದು ಅವರು ಆಶಿಸಿದರು.


ಈ ಸಂದರ್ಭದಲ್ಲಿ ಎರಡೂ ಗ್ರಾಮಗಳ ಹಿರಿಯರು, ಗ್ರಾಮಸ್ಥರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button