CrimeKannada NewsKarnataka NewsLatest

*ನಡು ರಸ್ತೆಯಲ್ಲೇ ರೌಡಿಶೀಟರ್‌ನ ಭೀಕರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ಹೊರವಲಯದ ಬೆಳಗುಂಬ ರಸ್ತೆಯ ‘ಗರುಡ ಕೆಫೆ’ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬೆಳಗುಂಬ ನಿವಾಸಿ ಮಲ್ಲ (38) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಆತನಿಗೆ ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ಗುಂಪು ಏಕಾಏಕಿ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ಮಲ್ಲನ ಮೇಲೆ ಸಶಸ್ತ್ರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಮುಖ ಹಾಗೂ ದೇಹವನ್ನು ಗುರುತೇ ಸಿಗದಂತೆ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಅಪರಾಧ ಹಿನ್ನೆಲೆ ಹೊಂದಿದ್ದ ಮಲ್ಲ, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದನು. ಈತ 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಪ್ರಸಿದ್ಧ ‘ಗಡ್ಡ ರಾಜು’ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು. ಆ ಭೀಕರ ಹತ್ಯೆ ಘಟನೆಯ ನಂತರವೇ ಈತನ ವಿರುದ್ಧ ಪೊಲೀಸರು ರೌಡಿಪಟ್ಟಿ ತೆರೆದು ನಿರಂತರ ನಿಗಾ ವಹಿಸಿದ್ದರು.

ಹಳೆಯ ಗ್ಯಾಂಗ್‌ವಾ‌ರ್ ಅಥವಾ ದ್ವೇಷವೇ ಈ ಕೊಲೆಗೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕ್ಯಾತ್ಸಂದ್ರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button