ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ – ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳು ಮೊಬೈಲ್, ಕಂಪ್ಯೂಟರ್ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿರುವುದರಿಂದ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಅವುಗಳನ್ನು ಉಳಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಗ್ರಾಮೀಣ ಇವರ ಸಂಯುಕ್ತ ಆಶ್ರಯದಲ್ಲಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಇವರು ಆಯೋಜಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಮನಪರಿವರ್ತನೆ ಮಾಡುವ ಮೂಲಕ ಕ್ರೀಡೆಗಳಲ್ಲಿ ತೊಡಗಿಸಿದರೆ ದೈಹಿಕ ಬೆಳವಣಿಗೆಯಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಈ ದಿಸೆಯಲ್ಲಿ ಪಾಲಕರು ಹೆಚ್ಚು ಮುತುವರ್ಜಿ ವಹಿಸಬೇಕು. ಕಳೆದ 5 ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಚನ್ನರಾಜ ತಿಳಿಸಿದರು.
ಇದೇ ಸಮಯದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಗೆದ್ದ ಹಾಗೂ ಸೋತ ಕಬಡ್ಡಿ ತಂಡಗಳಿಗೆ ಪ್ರೋತ್ಸಾಹ ಧನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ದಾಸಪ್ಪನವರ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಬಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಗ ಸಾಂಬ್ರೇಕರ್, ಸದಸ್ಯರಾದ ಮನೋಹರ್ ಸ ಮುಚ್ಚಂಡಿ, ತವನಪ್ಪ ಬಡಿಗೇರ್, ಭರಮಪ್ಪ ಬಾ ಗೌಡಕೆಂಚಕ್ಕಗೋಳ, ಲಕ್ಷ್ಮೀ ರ ಸಾಂಬ್ರೇಕರ್, ಶೋಭಾ ಪಾಟೀಲ, ಅರ್ಜುನ ಪಾಟೀಲ, ರಮೇಶ ಶಿವಾಜಿ ಹುಣಶೀಮರದ, ಶ್ರೀದೇವಿ ಲ ಹಂಚಿನಮನಿ, ದೈಹಿಕ ಶಿಕ್ಷಕರು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ