*ಮಹಾರಾಜಾ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಮೈಸೂರಿನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಗಾನ ಕೋಗಿಲೆ ಎಸ್.ಜಾನಕಿ ಹೃದಯಾಘಾತದಿಂದ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿಯೇ ನಡೆಯಲಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ಅಪೋಲೋ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಜಾನಕಿ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಫೋಲೋ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಬೇಕು ಎಂಬುದು ಎಸ್.ಜಾನಕಿಯವರ ಕೊನೆಯಾಸೆಯಾಗಿತ್ತಂತೆ. ಈ ಬಗ್ಗೆ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. ಹಾಗಾಗಿ ಮೈಸೂರಿನ ಅವರ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಜಾನಕಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದರು.
ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಂತಿಮ ದರ್ಶನಕ್ಕೆ ಜಾನಕಿ ಅಮ್ಮನವರ ಅಭಿಮಾನಿಗಳು, ಗಣ್ಯಾತಿಗಣ್ಯರು ಬರುವುದರಿಂದ ಭದ್ರತಾ ವ್ಯವಸ್ಥೆ, ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು. ಅಂತ್ಯಕ್ರಿಯೆ ಸಮಯದ ಬಗ್ಗೆ ಅವರ ಕುಟುಂಬ ಸದಸ್ಯರು ನಿರ್ಧರಿಸಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.




